ಬೆಂಗಳೂರು: ಬೀಗ ಹಾಕಿದ್ದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಎಸ್ಕೇಪ್ ಕಾರ್ತಿಕ್ ಬಂಧಿತ ಆರೋಪಿ. ಈತನಿಂದ 11 ಲಕ್ಷ ಮೌಲ್ಯದ 254 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಸುಮಾರು 80 ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, 17ನೇ ಬಾರಿಗೆ ಬಂಧನಕ್ಕೊಳಪಟ್ಟಿದ್ದಾನೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ, 2008 ಹಾಗೂ 2010 ರಲ್ಲಿ ಪೊಲೀಸ್ ಕಸ್ಟಡಿಯಿಂದ ಎಸ್ಕೇಪ್ ಆಗಿದ್ದನು. ಇದೀಗ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಕಳ್ಳತನ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಆಗಸ್ಟ್. 2ರಂದು ಕಾಮಾಕ್ಷಿಪಾಳ್ಯದಲ್ಲಿ ಠಾಣಾ ವ್ಯಾಪ್ತಿಯಲ್ಲಿ ದೂರುದಾರರು ವ್ಯಾಕ್ಸಿನ್ ಹಾಕಿಸುವ ಸಲುವಾಗಿ ಮನೆಗೆ ಬೀಗ ಹಾಕಿಕೊಂಡು ತೆರಳಿದ್ದರು. ಈ ವೇಳೆ ಖದೀಮ ಕಾರ್ತಿಕ್, ಮನೆಗೆ ನುಗ್ಗಿ ಅಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮದ್ಯಪ್ರಿಯರಿಗೆ ಕಾಡದ ನೈಟ್ ಕರ್ಫ್ಯೂ : ಕಳೆದ ವರ್ಷಕ್ಕಿಂತಲೂ ಅಧಿಕ ಮಾರಾಟ