ಬೆಂಗಳೂರು: ಜೂನ್ 7ರ ವರೆಗೆ ಜಾರಿಗೊಳಿಸಿರುವ ಲಾಕ್‌ಡೌನ್ ಅನ್ನು ನಾವು ಪೂರ್ಣಗೊಳಿಸುತ್ತೇವೆ. ಲಾಕ್‌ಡೌನ್ ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಗೃಹ ಇಲಾಖೆ ಜೂನ್ 30ರ ತನಕ ಕಠಿಣ ಕ್ರಮಕ್ಕೆ ಸೂಚನೆ ನೀಡಿದೆ. ಹೀಗಾಗಿ ಇದರ ಬಗ್ಗೆ ರಾಜ್ಯದಲ್ಲಿ ಅನುಷ್ಠಾನ ಮಾಡುವ ಸಂಬಂಧ ಸಭೆಯಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ. ಎಲ್ಲ ಸಚಿವರ ಜೊತೆ ಸಿಎಂ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ. ಸಿಎಂ ಶೀಘ್ರವೇ ಸಚಿವರ ಜೊತೆ ಸಭೆ ನಡೆಸಿ, ತೀರ್ಮಾನ ಮಾಡಲಿದ್ದಾರೆ. ಆದರೆ ಜೂನ್ 7ರ ವರೆಗೆ ಇರುವ ಲಾಕ್ ಡೌನ್ ನಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ತಿಳಿಸಿದರು.
ಕೇಂದ್ರದ ನೆರವಿನ ನಿರೀಕ್ಷೆಯಲ್ಲಿದ್ದೇವೆ: ಸಂಕಷ್ಟದಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರದ ನೆರವಿನ ನಿರೀಕ್ಷೆಯಲ್ಲಿದ್ದೇವೆ. ಮತ್ತೊಮ್ಮೆ ರಾಜ್ಯಕ್ಕೆ ಅಗತ್ಯ ವಿರುವ ಪರಿಹಾರಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸುತ್ತೇವೆ. ಶುಕ್ರವಾರ ಜಿಎಸ್ಟಿ ಕೌನ್ಸಿಲ್ ಸಭೆ ನಡೆದಿದೆ. ಸಭೆಯಲ್ಲಿ ಕರ್ನಾಟಕದ ಜಿಎಸ್ ಟಿ ಪಾಲು ಕೊಡುವಂತೆ ಒತ್ತಾಯಿಸಲಾಗಿದೆ. 11,000 ಕೋಟಿ ರೂ. ನಷ್ಟ ಪರಿಹಾರ ಕೊಡುವಂತೆ ಒತ್ತಡ ಹೇರಲಾಗಿದೆ. ಅದನ್ನು ಕೇಂದ್ರ ಸರ್ಕಾರ ಶೀಘ್ರವೇ ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದರು.
ಅದಲ್ಲದೆ ಲಾಕ್ ಡೌನ್ ಸಂಕಷ್ಟದಲ್ಲಿ ಉಂಟಾಗಿರುವ ಆರ್ಥಿಕ ನಷ್ಟ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ. ಕಳೆದ ಬಾರಿಯ ಲಾಕ್ ಡೌನ್ ನಲ್ಲೂ ಕೂಡ ಸಾಕಷ್ಟು ನಷ್ಟ ಉಂಟಾಗಿತ್ತು. ಈ ಬಾರಿಯ ಲಾಕ್ ಡೌನ್ ನಿಂದ ಸಾಕಷ್ಟು ನಷ್ಟ ಆಗುವ ನಿರೀಕ್ಷೆ ಇದೆ. ಈ ಬಗ್ಗೆ ತಜ್ಞರ ಸಮಿತಿ ವರದಿ ಪಡೆದು, ಮುಂದಿನ ಸಭೆಯಲ್ಲಿ ಪರಿಹಾರ ಪ್ರಮಾಣ ನಿಗದಿ ಮಾಡುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ಪ್ರಕರಣದ ಸಂಬಂಧ ತನಿಖೆ ನಡೆಯುತ್ತಿದೆ. ಒಂದೆರೆಡು ದಿನಗಳಲ್ಲಿ ಪ್ರಕರಣದ ಸ್ಪಷ್ಟ ಚಿತ್ರಣ ದೊರಕಲಿದೆ ಎಂದು ಗೃಹ ಸಚಿವರು ಮಾಹಿತಿ ನೀಡಿದರು.