ಬೆಂಗಳೂರು: ನಿನ್ನೆ ರಾತ್ರಿ ನಗರದಲ್ಲೆಡೆ ವ್ಯಾಪಕವಾಗಿ ಮಳೆಯಾಗಿದ್ದು, ಮುಂದಿನ ಎರಡು ದಿನವೂ ರಾಜ್ಯಕ್ಕೆ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ.
ಗುಡುಗು ಸಹಿತ ಮಳೆ ಸುರಿಯಲಿದೆ. ತಾಪಮಾನದ ಪ್ರಮಾಣ ಹೆಚ್ಚಾದ್ದರಿಂದ ಮುಂಗಾರು ಪೂರ್ವ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಹಿನ್ನೆಲೆ ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ ಹೆಚ್ಚು ಬಿಸಿಲಿತ್ತು. ಮಧ್ಯ ಮಹಾರಾಷ್ಟ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಮಳೆಯಾಗುತ್ತಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕ ಡಾ. ಶ್ರೀನಿವಾಸ ರೆಡ್ಡಿ ತಿಳಿಸಿದರು.
ಉತ್ತರ ಒಳನಾಡಿನಲ್ಲಿ ಇಂದು ಮಾತ್ರ ಮಳೆಯಾಗಲಿದೆ. ಉಳಿದಂತೆ ದಕ್ಷಿಣ ಒಳನಾಡಿನಲ್ಲಿ ಇಂದು, ನಾಳೆ, ನಾಡಿದ್ದು ಮಳೆಯಾಗಲಿದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲೂ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದುಡಾ. ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.