ಬೆಂಗಳೂರು : ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ. ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ. ವರ್ಷದ ಮೊದಲ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸೋಮವಾರ ಬೆಳಗ್ಗೆ 11 ಗಂಟೆಗೆ ಭಾಷಣ ಮಾಡಲಿದ್ದಾರೆ.
ಕೋವಿಡ್ ಸೋಂಕು ನಿಯಂತ್ರಣ ಕ್ರಮಗಳ ನಡುವೆ ಅಧಿವೇಶನಕ್ಕೆ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿದೆ. ಜಂಟಿ ಅಧಿವೇಶನ ಫೆಬ್ರವರಿ 14 ರಿಂದ 25ರ ವರೆಗೆ ನಡೆಯಲಿದೆ. ನಂತರ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ.
ವಾಕ್ಸಮರ : ಹಿಜಾಬ್ ಹಾಗೂ ಕೇಸರಿ ಸಂಘರ್ಷ ತಾರಕಕ್ಕೇರಿರುವ ಬೆನ್ನಲ್ಲೇ ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ವೇದಿಕೆಯಾಗುವ ಸಾಧ್ಯತೆ ಇದೆ.
ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಈಗಾಗಲೇ ಈ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಪರಸ್ಪರ ವಾಗ್ದಾಳಿ ನಡೆಸಿದ್ದಾರೆ.
ಇದೀಗ ಸದನದಲ್ಲೂ ಈ ವಿಚಾರವನ್ನು ಪ್ರಸ್ತಾಪಿಸಲು ತಯಾರಿ ನಡೆದಿದ್ದು, ಬಿಜೆಪಿ ಮುಖಂಡರು ನೀಡಿರುವ ವಿವಾದಾತ್ಮಕ ಹೇಳಿಕೆಗಳು ಸಹ ಸದನದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಾತಿನ ವಾಗ್ಬಾಣ ಬಿಡಲು ಪ್ರತಿಪಕ್ಷಗಳು ಸಜ್ಜಾಗಿದ್ದರೆ, ಆಡಳಿತ ಪಕ್ಷವೂ ಸಹ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಲು ಸನ್ನದ್ಧವಾಗಿದೆ.
ಬಸವರಾಜ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿಯಾಗಿ ಇದು ಎರಡನೇ ಅಧಿವೇಶನ. ಈ ನಿಟ್ಟಿನಲ್ಲಿ ಆಡಳಿತ ಪಕ್ಷವಾಗಿ ಸರ್ಕಾರದ ನಿಲುವುಗಳನ್ನು ಸಮರ್ಥನೆ ಮಾಡಲು ಸಿಎಂ, ಶಾಸಕರು ಹಾಗೂ ಸಚಿವರಿಗೆ ದಾಖಲೆಗಳ ಜೊತೆಗೆ ಉತ್ತರ ನೀಡಲು ಸಜ್ಜಾಗಿ ಬರುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ಮತ್ತೊಂದೆಡೆ ಸೋಮವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಬಳಿಕ ಯಾವ ವಿಚಾರಗಳನ್ನು ಪ್ರಸ್ತಾಪ ಮಾಡಬೇಕು ಎಂಬ ನಿಟ್ಟಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಆಡಳಿತ ಪಕ್ಷಕ್ಕೆ ಬಿಸಿ ಮುಟ್ಟಿಸಲು ವಿರೋಧ ಪಕ್ಷವಾಗಿ ಕಾಂಗ್ರೆಸ್ ವಿಫಲವಾಗಿತ್ತು. ಬಿಟ್ ಕಾಯಿನ್, 40 ಫರ್ಸೆಂಟ್ ಕಾಂಗ್ರೆಸ್ ಬತ್ತಳಿಕೆಯಲ್ಲಿ ಇದ್ದರೂ ಅದನ್ನು ಪ್ರಯೋಗ ಮಾಡಲು ಸಾಧ್ಯವಾಗಿರಲಿಲ್ಲ. ಕೊನೆ ಗಳಿಗೆಯಲ್ಲಿ ಸಚಿವ ಭೈರತಿ ಬಸವರಾಜ್ ವಿರುದ್ಧದ ಭೂ ಹಗರಣದ ಆರೋಪವನ್ನು ಎತ್ತಿಕೊಂಡರೂ ಅದೂ ಸಫಲವಾಗಿರಲಿಲ್ಲ. ಈ ನಿಟ್ಟಿನಲ್ಲಿ ಈ ಬಾರಿಯ ಜಂಟಿ ಅಧಿವೇಶನದಲ್ಲಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಬಗ್ಗೆ ಕಾಂಗ್ರೆಸ್ ತಯಾರಿ ಮಾಡಿಕೊಳ್ಳುತ್ತಿದೆ.
ಇನ್ನು ಮೇಕೆದಾಟು, ಮಹಾದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳು ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳನ್ನು ಮುಂದಿಟ್ಟುಕೊಂಡು ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ.
ಕಳೆದ ತಿಂಗಳು ಮೇಕೆದಾಟು ಯೋಜನೆಗೆ ಅಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸಿತ್ತು. ಕೋವಿಡ್ ಕಾರಣಕ್ಕಾಗಿ ಪಾದಯಾತ್ರೆಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಹಾಗಾಗಿ, ಮೇಕೆದಾಟು, ಮಹದಾಯಿ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುವುದು ಕಾಂಗ್ರೆಸ್ ತಂತ್ರಗಾರಿಕೆಯಾಗಿದೆ.
ಹತ್ತು ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. ಅಲ್ಲದೆ, ಕೆಲವೊಂದು ಮಹತ್ವದ ಮಸೂದೆಗಳು ಅಧಿವೇಶನದಲ್ಲಿ ಅಂಗೀಕಾರವಾಗಲಿದೆ.