ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ತಮ್ಮ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಾ ಬಂದಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೇಡಿಕೆಯನ್ನು ವಿಧಾನಸಭೆಯಲ್ಲಿ ತಿರಸ್ಕರಿಸುವ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ಇಂದು ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿಗಳು ಉತ್ತರ ನೀಡಿದ ನಂತರ ಎದ್ದು ನಿಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪಂಚಮಸಾಲಿ, ಹಾಲುಮತ ಸಮುದಾಯದವರು ತಮ್ಮನ್ನು ಹಿಂದುಳಿದ ವರ್ಗದ ಪಟ್ಟಿಗೆ ಸೇರಿಸಲು ಬೀದಿಗಿಳಿದಿದ್ದಾರೆ. ಅವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು. ಅವರ ಬೇಡಿಕೆ ನ್ಯಾಯಯುತವಾಗಿದೆ. ಅದನ್ನು ಈಡೇರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು, ವಿಳಂಬ ಮಾಡಬಾರದು. ಆದರೆ ಉದ್ದೇಶಪೂರ್ವಕವಾಗಿ ಆ ಸಮುದಾಯದ ಬೇಡಿಕೆಯನ್ನು ಈಡೇರಿಸಲು ಸರ್ಕಾರ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ನಮ್ಮದು ರಾಷ್ಟ್ರೀಯ ಪಕ್ಷ, ಪ್ರಾದೇಶಿಕ ಪಕ್ಷವಲ್ಲ. ಇಲ್ಲಿ ನಾನೇ ಕುಳಿತು ಸ್ವಯಂ ಆಗಿ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇಂತಹ ವಿಷಯಗಳ ಬಗ್ಗೆ ಪ್ರಧಾನಿ ಮತ್ತಿತರರ ಬಳಿ ಚರ್ಚಿಸಿ ಮುಂದಿನ ಹೆಜ್ಜೆ ಇಡಬೇಕಾಗುತ್ತದೆ. ಹೀಗಿರುವಾಗ ಈ ವಿಷಯದಲ್ಲಿ ನಾನು ಏನೂ ಮಾಡುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದರು.
ಈ ವೇಳೆ ಜೆಡಿಎಸ್ ಸದಸ್ಯ ಬಂಡೆಪ್ಪ ಕಾಶೆಂಪೂರ ಮಾತನಾಡಿ, ಪಂಚಮಸಾಲಿ ಮತ್ತು ಕುರುಬ ಸಮುದಾಯದವರು ತಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ವಿಷಯದಲ್ಲಿ ಸರ್ಕಾರ ತುರ್ತು ನಿರ್ಧಾರ ತೆಗೆದುಕೊಳ್ಳಬೇಕು. ಯಾವ ಕಾರಣಕ್ಕೂ ವಿಳಂಬ ಮಾಡಕೂಡದು ಎಂದು ಒತ್ತಾಯಿಸಿದರು.
ಬಳಿಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಪಂಚಮಸಾಲಿ ಸಮುದಾಯದ ಬೇಡಿಕೆಯನ್ನು ಈಡೇರಿಸಬೇಕು. ಅವರಿಗೆ ಅನ್ಯಾಯವಾಗುತ್ತಿದೆ ಎಂದು ಕೂಗಾಡಿದರು. ಈ ವೇಳೆ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಈ ವಿಷಯದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ ಚರ್ಚೆಯನ್ನು ಮುಂದುವರಿಸಬೇಕಾಗಿಲ್ಲ ಎಂದು ಹೇಳಿದರು.