ಬೆಂಗಳೂರು: ಹಲವು ಕಾರಣಗಳಿಂದ ಮೂರ್ನಾಲ್ಕು ಬಾರಿ ಮುಂದೂಡಿಕೆಯಾಗಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಕಡೆಗೂ ಮುಹೂರ್ತ ನಿಗದಿಯಾಗಿದೆ. ಅಕ್ಟೋಬರ್ 7ರಂದು ನಗರದ ಅರಮನೆ ಮೈದಾನದಲ್ಲಿ ಕಾರ್ಯಕಾರಿಣಿ ಸಭೆ ಆಯೋಜನೆ ಮಾಡಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆಹ್ವಾನ ನೀಡಲಾಗಿದೆ ಎನ್ನಲಾಗುತ್ತಿದೆ.
ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೇರಿದಂತೆ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರು ಭಾಗಿಯಾಗಲಿದ್ದಾರೆ.
ಸಭೆಯ ಉದ್ಘಾಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಆಹ್ವಾನ ನೀಡಲಾಗಿದೆ. ಆದರೆ, ಅಮಿತ್ ಶಾ ಆಗಮಿಸುವ ಬಗ್ಗೆ ಇನ್ನೂ ರಾಜ್ಯ ನಾಯಕರಿಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ಸಂಘಟನೆ ಚುರುಕುಗೊಳಿಸುವ ಕುರಿತು ಈ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗುತ್ತದೆ. ಬಿಜೆಪಿ ಸಮಾವೇಶಗಳು ಹಾಗೂ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಜವಾಬ್ದಾರಿ ಹಂಚಿಕೆ ಮಾಡುವ ಜೊತೆ ಸಮಾವೇಶ ಮತ್ತು ಪ್ರವಾಸ ಯಶಸ್ವಿಗೊಳಿಸಲು ಅಗತ್ಯ ರೂಪುರೇಷೆ ಸಿದ್ಧಪಡಿಸಲಾಗುತ್ತದೆ ಎನ್ನಲಾಗಿದೆ.
ಪ್ರತಿ ಎರಡು ತಿಂಗಳಿಗೊಮ್ಮೆ ಒಂದೊಂದು ಜಿಲ್ಲೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ನಡೆಸಿಕೊಂಡು ಬರುತ್ತಿರುವ ಬಿಜೆಪಿ ಈ ಬಾರಿ ಬೆಂಗಳೂರಿನಲ್ಲಿ ಕಾರ್ಯಕಾರಿಣಿ ಸಭೆ ಆಯೋಜನೆ ಮಾಡಿದೆ. ಆದರೆ ಮಳೆ, ನೆರೆ ಕಾರಣದಿಂದ ಮೂರ್ನಾಲ್ಕು ಬಾರಿ ದಿನಾಂಕದಲ್ಲಿ ಬದಲಾವಣೆ ಮಾಡಿ ಇದೀಗ ಅಕ್ಟೋಬರ್ 7ಕ್ಕೆ ಸಭೆ ನಿಗದಿಪಡಿಸಿ ಅಗತ್ಯ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ: ರಾಹುಲ್ ಪಾದಯಾತ್ರೆ ಬಳಿಕ ಸಿದ್ದರಾಮಯ್ಯ ರಥಯಾತ್ರೆ ಪ್ರಾರಂಭ?