ಬೆಂಗಳೂರು: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ ಆರೋಪ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆ ಹಿರೇಹಡಗಲಿ ಮಹಾಸಂಸ್ಥಾನ ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ಸಲ್ಲಿಸಿರುವ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 16ಕ್ಕೆ ಪ್ರಕಟಿಸುವುದಾಗಿ ಬೆಂಗಳೂರಿನ ನ್ಯಾಯಾಲಯವು ಹೇಳಿದೆ.
ಹಾಲಶ್ರೀ ಸ್ವಾಮೀಜಿ ಸಲ್ಲಿಸಿರುವ ಜಾಮೀನು ಅರ್ಜಿಯ ವಾದ - ಪ್ರತಿವಾದ ಆಲಿಸಿದ ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಟಿ ಗೋವಿಂದಯ್ಯ ಬುಧವಾರ ಆದೇಶ ಕಾಯ್ದಿರಿಸಿದರು. ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅರುಣ್ ಶ್ಯಾಮ್, ತಡವಾಗಿ ಪ್ರಕರಣವಾಗಿ ದಾಖಲಿಸಲಾಗಿದೆ. ಅಲ್ಲದೇ, ಬಹುತೇಕ ಎಲ್ಲ ಹಣವನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅರ್ಜಿದಾರರ ವಿರುದ್ಧ ದಾಖಲಿಸಿರುವ ಸೆಕ್ಷನ್ಗಳು ಇಲ್ಲಿ ಅನ್ವಯಿಸುವುದಿಲ್ಲ ಎಂದು ವಾದಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸರ್ಕಾರಿ ಅಭಿಯೋಜಕರು, ಅರ್ಜಿದಾರರ ವಿಚಾರಣೆ ನಡೆಯುತ್ತಿದೆ. ಇನ್ನಷ್ಟೇ ಆರೋಪಪಟ್ಟಿ ಸಲ್ಲಿಕೆಯಾಗಬೇಕಿದೆ. ಅರ್ಜಿದಾರರು ಸ್ವಾಮೀಜಿಯಾಗಿದ್ದಾರೆ. ಇಂಥ ಪ್ರಕರಣದಲ್ಲಿ ಸಿಲುಕಿರುವುದರಿಂದ ಜಾಮೀನು ನೀಡಿದಲ್ಲಿ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗಲಿದೆ ಎಂದು ವಿವರಿಸಿದರು.
ಪ್ರಕರಣದ ಹಿನ್ನೆಲೆ ಏನು? ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ಹಣ ವಂಚಿಸಿದ್ದಾರೆ ಎಂದು ಆರೋಪಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ಆರೋಪಿಗಳಾದ ಹಿಂದೂ ಕಾರ್ಯಕರ್ತೆ ಚೈತ್ರಾ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇತ್ತ ಪ್ರಕರಣದ ಮೂರನೇ ಆರೋಪಿಯಾಗಿರುವ ಸ್ವಾಮೀಜಿಯು ದೂರುದಾರರಿಂದ 1.50 ಕೋಟಿ ಹಣ ಪಡೆದ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣ ದಾಖಲಾದ ಬಳಿಕ ಸ್ವಾಮೀಜಿ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಸೆಪ್ಟೆಂಬರ್ 19 ರಂದು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸ್ವಾಮೀಜಿಯನ್ನು ಪೊಲೀಸರು ಒಡಿಶಾದ ಕಟಕ್ನಲ್ಲಿ ಬಂಧಿಸಿದ್ದರು.
ಆರೋಪಿಗಳಿಂದ ಹಣ ಜಪ್ತಿ: ಬಿಜೆಪಿಯಿಂದ ಟಿಕೆಟ್ ವಂಚನೆ ಪ್ರಕರಣದಲ್ಲಿ 8 ಜನ ಆರೋಪಿಗಳನ್ನು ಬಂಧಿಸಿ ಸಿಸಿಬಿ ತನಿಖಾಧಿಕಾರಿಗಳು ವಿಚಾರಣೆ ತೀವ್ರಗೊಳಿಸಿದ್ದಾರೆ. ಹಿರೇಹಡಗಲಿ ಹಾಲಶ್ರೀ ಮಠದಲ್ಲಿ 56 ಲಕ್ಷ ರೂ ಮತ್ತು ಚೈತ್ರಾ ಅವರಿಂದ 2 ಕೋಟಿ ರೂ., ಚಿನ್ನಾಭರಣ ಮತ್ತು ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದೇ ಪ್ರಕರಣದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಂದ ಚೈತ್ರಾ ಮತ್ತು ಇತರೆ ಆರೋಪಿಗಳು 3.50 ಕೋಟಿ ಹಣ ಪಡೆದು ವಂಚಿಸಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹಾಲಶ್ರೀ ವಿಚಾರಣೆ ಚುರುಕಾದ ಬೆನ್ನಲೇ ಕಂತೆ ಕಂತೆ ಹಣ ಪತ್ತೆ.. ವಿಡಿಯೋ ಮಾಡಿ ಸಿಸಿಬಿಗೆ ಪತ್ರ ಬರೆದ ವ್ಯಕ್ತಿ