ಬೆಂಗಳೂರು : ರಾಜರಾಜೇಶ್ವರಿನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಅಂತ್ಯಗೊಂಡಿದ್ದು, ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
ಅಕ್ಟೋಬರ್ 9 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿತ್ತು. ಇಂದು ನಾಮಪತ್ರ ಸಲ್ಲಿಕೆಯ ಕೊನೆ ದಿನವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 19 ಕಡೆಯ ದಿನವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಮೂರು ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.
ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹೆಚ್. ಕುಸುಮಾ, ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ನಾಯ್ಡು ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ವಿ.ಕೃಷ್ಣಮೂರ್ತಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ, ಇತರೆ 9 ಅಭ್ಯರ್ಥಿಗಳು ಕೂಡ ಈ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಬಿಜೆಪಿ ಅಭ್ಯರ್ಥಿಯಾಗಿ ಸಿ.ಎಂ.ರಾಜೇಶ್‍ಗೌಡ, ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ದಿ.ಬಿ.ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ ಮೂರು ಮಂದಿ ಪಕ್ಷೇತರರು ನಿನ್ನೆಯವರೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಮೂರು ರಾಜಕೀಯ ಪಕ್ಷಗಳಿಗೆ ಈ ಎರಡೂ ಕ್ಷೇತ್ರಗಳು ಪ್ರತಿಷ್ಠೆಯ ಕಣವಾಗಿದ್ದು, ಜಿದ್ದಾಜಿದ್ದಿನ ಹೋರಾಟಕ್ಕೆ ಅಣಿಯಾಗಿವೆ. ಈಗಾಗಲೇ ಆಯಾ ಕ್ಷೇತ್ರಗಳಲ್ಲಿ ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ರಾಜಕೀಯ ಪಕ್ಷಗಳ ನಾಯಕರು, ಮುಖಂಡರು ಬಿರುಸಿನ ಪ್ರಚಾರ ಆರಂಭಿಸಿ ಮತದಾರರನ್ನು ಓಲೈಸುವ ಯತ್ನ ಮಾಡುತ್ತಿದ್ದಾರೆ. ಪರಸ್ಪರ ಆರೋಪ -ಪ್ರತ್ಯಾರೋಪಗಳೂ ಜೋರಾಗಿಯೇ ಇವೆ.
ಎರಡೂ ಕ್ಷೇತ್ರಗಳಿಗೆ ನವೆಂಬರ್ 3 ರಂದು ಮತದಾನ ನಡೆಯಲಿದ್ದು, ನವೆಂಬರ್ 10 ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರ ಬೀಳಲಿದೆ.
ಇನ್ನೂ ಅ. 28 ರಂದು ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈಗಾಗಲೇ ಮೂರು ಪಕ್ಷಗಳ ಅಭ್ಯರ್ಥಿಗಳು, ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.