ಬೆಂಗಳೂರು : ಲೋಕಾಯುಕ್ತ ಸಂಸ್ಥೆಯಲ್ಲಿ ಕಳೆದೆರಡು ವರ್ಷಗಳಿಂದ ಖಾಲಿ ಇದ್ದ ಉಪಲೋಕಾಯುಕ್ತ ಹುದ್ದೆಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಹೇಮಲತಾ ಪಿ. ಅವರು ರಾಜ್ಯಪಾಲರ ಆದೇಶಾನುಸಾರ ನಿನ್ನೆ (ಮಾ.22) ಅಧಿಸೂಚನೆ ಹೊರಡಿಸಿದ್ದಾರೆ.
ಉಪಲೋಕಾಯುಕ್ತ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಅವರನ್ನು ನೇಮಕ ಮಾಡುವ ವಿಚಾರವಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆ ಸ್ಪೀಕರ್, ವಿಧಾನ ಪರಿಷತ್ ಅಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರ ಜತೆ ಸಮಾಲೋಚಿಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.
ರಾಜ್ಯ ಸರ್ಕಾರದ ಶಿಫಾರಸ್ಸಿನ ಮೇರೆಗೆ ರಾಜ್ಯಪಾಲರು ಕರ್ನಾಟಕ ಲೋಕಾಯುಕ್ತ ಕಾಯ್ದೆ-1984ರ ಸೆಕ್ಷನ್ 3(1)ರ ಪ್ರಕಾರ ನ್ಯಾ. ಕೆ.ಎನ್ ಫಣೀಂದ್ರ ಅವರನ್ನು ಉಪಲೋಕಾಯುಕ್ತರಾಗಿ ನೇಮಕ ಮಾಡಿದ್ದಾರೆ. 2020ರ ಡಿಸೆಂಬರ್ನಲ್ಲಿ ನಿವೃತ್ತ ನ್ಯಾಯಮೂರ್ತಿ ಎನ್. ಆನಂದ್ ಅವರು ಉಪಲೋಕಾಯುಕ್ತ ಹುದ್ದೆಯಿಂದ ನಿವೃತ್ತರಾದ ಬಳಿಕ ಈ ಹುದ್ದೆ ಖಾಲಿ ಉಳಿದಿತ್ತು. ಇದೀಗ ಖಾಲಿಯಿದ್ದ ಹುದ್ದೆಗೆ ರಾಜ್ಯ ಸರ್ಕಾರ ನ್ಯಾ. ಕೆ.ಎನ್ ಫಣೀಂದ್ರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.