ಬೆಂಗಳೂರು : ವಿಧಾನ ಪರಿಷತ್ ಸದಸ್ಯರಾಗಿ ಚುನಾಯಿತರಾಗಿರುವ ಸೂರಜ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಹಾಸನ ಜಿಲ್ಲಾ ನ್ಯಾಯಾಲಯದ ಮೂಲಕ ಸಮನ್ಸ್ ಜಾರಿಗೊಳಿಸಲು ಆದೇಶಿಸಿದೆ. ಈ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು.
ಹಾಸನ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೊಳೆನರಸೀಪುರದ ಕಾಮಸಮುದ್ರ ನಿವಾಸಿ ಎಲ್.ಹನುಮೇಗೌಡ ಎಂಬುವರು ಅರ್ಜಿ ಸಲ್ಲಿಸಿದ್ದಾರೆ.
ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಹಾಜರಾಗಿ, ಅರ್ಜಿ ಸಂಬಂಧ ಈ ಹಿಂದೆಯೇ ಸೂರಜ್ ರೇವಣ್ಣ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಅದರಂತೆ, ಸೂರಜ್ ರೇವಣ್ಣ ಚುನಾವಣೆ ನಾಮಪತ್ರದಲ್ಲಿ ಉಲ್ಲೇಖಿಸಿದ್ದ ವಿಳಾಸಕ್ಕೆ ನೋಟಿಸ್ ಜಾರಿ ಮಾಡಲಾಗಿತ್ತು.
ಆದರೆ, ಆ ವಿಳಾಸ ಸರಿಯಿಲ್ಲ ಎಂದು ನೋಟಿಸ್ ವಾಪಸ್ ಬಂದಿದೆ. ಬಳಿಕ, ಮಾರ್ಚ್ 11ರಂದು ಹೈಕೋರ್ಟ್ ಮತ್ತೆ ಸಮನ್ಸ್ ಜಾರಿಗೊಳಿಸಿತ್ತು. ಅದೂ ಸಹ ವಿಳಾಸ ಸರಿಯಿಲ್ಲ ಎಂಬ ಕಾರಣಕ್ಕೆ ಹಿಂದಕ್ಕೆ ಬಂದಿದೆ. ಪ್ರತಿವಾದಿಯಾಗಿರುವ ಸೂರಜ್ ರೇವಣ್ಣ ಅವರಿಗೆ ಈವರೆಗೂ ಸಮನ್ಸ್ ಜಾರಿಯಾಗಿಲ್ಲ ಎಂದು ಪೀಠಕ್ಕೆ ತಿಳಿಸಿದರು.
ವಾದ ಪರಿಗಣಿಸಿದ ಪೀಠ, ಸೂರಜ್ ರೇವಣ್ಣ ಅವರಿಗೆ ಹಾಸನ ಜಿಲ್ಲಾ ನ್ಯಾಯಾಲಯದ ಮೂಲಕ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಸೂರಜ್ ರೇವಣ್ಣ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ಪತ್ನಿಗೆ ಸಂಬಂಧಿಸಿದ ಯಾವುದೇ ಮಾಹಿತಿ ತಿಳಿಸಿಲ್ಲ. ಅಲ್ಲದೆ, ಪತ್ನಿಯ ವಿವರ, ನಗದು, ಸ್ಥಿರಾಸ್ತಿ, ಬ್ಯಾಂಕ್ ಖಾತೆ, ಚಿನ್ನ, ಬೆಳ್ಳಿ ಆಭರಣಗಳು ಹಾಗೂ ಮತ್ತಿತರೆ ವಿವರಗಳನ್ನು ನಮೂದಿಸುವ ಕಾಲಂನಲ್ಲಿ ‘ಅನ್ವಯವಾಗುವುದಿಲ್ಲ‘ ಎಂದು ತಿಳಿಸಿದ್ದಾರೆ.
ಜೊತೆಗೆ, ತಮ್ಮ ಬ್ಯಾಂಕ್ ಖಾತೆಗಳ ಬಗ್ಗೆಯೂ ಸರಿಯಾದ ಮಾಹಿತಿ ನೀಡಿಲ್ಲ. ಚುನಾವಣಾ ಅಕ್ರಮ ಎಸಗಿರುವುದರಿಂದ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಇದನ್ನೂ ಓದಿ: 'ಉಚಿತ ಕೊಡುಗೆ' ಘೋಷಿಸಿದ್ದಕ್ಕೆ ರಾಜಕೀಯ ಪಕ್ಷಗಳ ನೋಂದಣಿ ರದ್ದು ಅಸಾಧ್ಯ : ಚುನಾವಣಾ ಆಯೋಗ