ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಕೋರಿ ರಾಜ್ಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಬಲ್ಲಾಗೆ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಿದ್ದಾರೆ. ಆ ಮೂಲಕ ಮೀಸಲಾತಿ ಹೆಚ್ಚಳಕ್ಕೆ ಕಾನೂನು ಬಲ ನೀಡಲು ಶೆಡ್ಯೂಲ್ 9 ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.
ಫೆ. 9ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಕ್ಯಾನ್ಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಅಧಿನಿಯಮ, 2022 (ಕರ್ನಾಟಕ ಕಾಯ್ದೆ 01 2023) ನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಲಾಗಿತ್ತು.
ಮೀಸಲಾತಿ ಹೆಚ್ಚಳದ ಈ ವಿಧೇಯಕಕ್ಕೆ 2023ರ ಜನವರಿ 11ರಂದು ರಾಜ್ಯಪಾಲರಿಂದ ಒಪ್ಪಿಗೆ ಪಡೆಯಲಾಗಿತ್ತು. ಅದರಂತೆ ರಾಜ್ಯ ಸರ್ಕಾರ ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿ(ಎಸ್‌ಸಿ)ಗೆ ಶೇ.15ರಿಂದ ಶೇ.17 ಹಾಗೂ ಪರಿಶಿಷ್ಟ ಪಂಗಡ(ಎಸ್‌ಟಿ)ಕ್ಕೆ ಶೇ.3ರಿಂದ ಶೇ.7ಕ್ಕೆ ಹೆಚ್ಚಳ ಮಾಡಿ ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆದಿತ್ತು. ಆದರೆ, ಈ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಕಾನೂನು ಬಲ ನೀಡಲು ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರ್ಪಡೆ ಮಾಡಬೇಕಾಗಿತ್ತು. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿತ್ತು.
ಇದೀಗ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳ ಪ್ರಕ್ರಿಯೆಯಲ್ಲಿನ ತನ್ನ ಕೊನೆಯ ಹೆಜ್ಹೆಯನ್ನೂ ಇಟ್ಟಿದೆ. ಮೀಸಲಾತಿ ಹೆಚ್ಚಳ ಸಂಬಂಧ ಶೆಡ್ಯೂಲ್ 9ಕ್ಕೆ ಸೇರಿಸಲು ಕೋರಿ ಕೇಂದ್ರ ಗೃಹ ಖಾತೆ ಕಾರ್ಯದರ್ಶಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಪತ್ರ ಬರೆದಿದ್ದಾರೆ. ಪತ್ರದಲ್ಲಿ ರಾಜ್ಯಪಾಲರ ಅಂಕಿತ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಕ್ಯಾನ್ಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಅಧಿನಿಯಮ 2022ನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸುವಂತೆ ಕೋರಿದ್ದಾರೆ.
ಇತ್ತ ಪ್ರತಿಪಕ್ಷಗಳು ಮೀಸಲಾತಿ ಹೆಚ್ಚಳ ಸಂಬಂಧ ಶೆಡ್ಯೂಲ್ 9ಕ್ಕೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ್ದವು. ಇಲ್ಲವಾದರೆ ಮೀಸಲಾತಿ ಹೆಚ್ಚಳಕ್ಕೆ ಯಾವುದೇ ಕಾನೂನು ಬಲ ಇಲ್ಲ. ಅದು ಬರೇ ಕಣ್ಣೊರೆಸುವ ತಂತ್ರ ಎಂದು ಬಿಜೆಪಿ ಸರ್ಕಾರವನ್ನು ಟೀಕಿಸಿದ್ದರು.
ಇದೀಗ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳ ಸಂಬಂಧ ಶೆಡ್ಯೂಲ್ 9ಕ್ಕೆ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಮೂಲಕ ಮಹತ್ವದ ಘಟ್ಟ ತಲುಪಿದೆ. ಮೀಸಲಾತಿ ಹೆಚ್ಚಳದ ಚೆಂಡು ಕೇಂದ್ರ ಸರ್ಕಾರದ ಅಂಗಳಕ್ಕೆ ಬಿದ್ದಿದೆ. ಕೇಂದ್ರ ಸರ್ಕಾರ ಮೀಸಲಾತಿ ಹೆಚ್ಚಳ ಸಂಬಂಧ 9ನೇ ಶೆಡ್ಯೂಲ್ಗೆ ಸೇರ್ಪಡೆಗೊಳಿಸಿದರೆ ಕಾಯ್ದೆಗೆ ಕಾನೂನು ರಕ್ಷಣೆ ಸಿಗಲಿದೆ.
ಬದ್ಧತೆಗೆ ನಿದರ್ಶನ- ಸಿಎಂ: ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆ ಸಂಬಂಧ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕಾಯ್ದೆಯನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಮೀಸಲಾತಿ ಪ್ರಮಾಣ ಶೇ. 15ರಿಂದ ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ. 3ರಿಂದ ಶೇ. 7ಕ್ಕೆ ಹೆಚ್ಚಿಸಲಾಗಿದೆ. ಅವಕಾಶ ವಂಚಿತ ಸಮುದಾಯಗಳ ಕುರಿತು ನಮ್ಮ ಸರ್ಕಾರದ ಬದ್ಧತೆಗೆ ಇದು ನಿದರ್ಶನವಾಗಿದೆ ಎಂದು ಸಿಎಂ ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಸಮೀಪ 2 ಸಾವಿರ ಎಕರೆ ಪ್ರದೇಶದಲ್ಲಿ ಜ್ಞಾನ ನಗರಿ: ಮುಖ್ಯಮಂತ್ರಿ ಬೊಮ್ಮಾಯಿ