ಬೆಂಗಳೂರು : ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಮುಂದಿನ 48 ಘಂಟೆಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಖ್ಯವಾಗಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ : ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬುಧವಾರದ ಮಳೆಯ ಪ್ರಮಾಣ : ತೊಂಡೇಭಾವಿ 3 ಸೆಂ.ಮೀ., ಧರ್ಮಸ್ಥಳ, ಸೋಮವಾರಪೇಟೆ, ವಿರಾಜಪೇಟೆ ಹಾಗೂ ಗೌರಿಬಿದನೂರಿನಲ್ಲಿ ತಲಾ 2 ಸೆಂ.ಮೀ., ಅರಕಲಗೂಡು, ಬಂಡೀಪುರ, ಕೊಣನೂರು ಹಾಗೂ ಕುಣಿಗಲ್ನಲ್ಲಿ ತಲಾ 1 ಸೆಂ.ಮೀ ಮಳೆ ಬಿದ್ದಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ ದಾಖಲಾಗಿದ್ದು, ಮುಖ್ಯವಾಗಿ ವಿಜಯಪುರದಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಇತ್ತು.
ಇದನ್ನೂ ಓದಿ: ಮಳೆ ಅಬ್ಬರ: ಚೆನ್ನೈ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ- ವಿಡಿಯೋ