ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ದ. ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಸೆ. 16ರಿಂದ 20ರವರೆಗೆ ವ್ಯಾಪಕ ಮಳೆಯಾಗಲಿದ್ದು, 16 ಮತ್ತು 17ರಂದು ಯಲ್ಲೋ ಅಲರ್ಟ್, 18ರಿಂದ 20ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಸೆ. 16ರಿಂದ 20ರವರೆಗೆ ವ್ಯಾಪಕ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ದ. ಒಳನಾಡಿನಲ್ಲಿ ಸೆ. 16ರಿಂದ 20ರವರೆಗೆ ವ್ಯಾಪಕ ಮಳೆಯಾಗಲಿದ್ದು, ಸೆ. 18ರಂದು ಯಲ್ಲೋ ಅಲರ್ಟ್ ಹಾಗೂ ಸೆ. 19 ಮತ್ತು 20ರಂದು ಆರೆಂಜ್ ಅಲರ್ಟ್ ಘೊಷಿಸಲಾಗಿದೆ. ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲಿ ಭಾರೀ ಹಾಗೂ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸೆ. 16 ಮತ್ತು 17ರಂದು ಹಗುರ ಮಳೆಯಾಗಬಹುದು ಎಂದು ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.