ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ವಿಶ್ವನಾಥ್ ಪಿ. ಹಿರೇಮಠ್ ಅವರಿಗೆ ಕೆಎಎಸ್ ಎ ಗ್ರೂಪ್ ಹುದ್ದೆ ಕಲ್ಪಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ವಿಶ್ವನಾಥ್ ಪಿ. ಹಿರೇಮಠ್ ಅವರಿಗೆ ಕೆಎಎಸ್ ಹುದ್ದೆ ಕಲ್ಪಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಎಸ್. ಎನ್. ರುದ್ರೇಶ್ ಸೇರಿ ಸರ್ಕಾರದ ವಿವಿಧ ಇಲಾಖೆಗಳ ಒಟ್ಟು 49 ಅಧಿಕಾರಿಗಳು ಸಲ್ಲಿಸಿರುವ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ವಿಶ್ವನಾಥ್ ಬಿ. ಹಿರೇಮಠ ಅವರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ನವೆಂಬರ್ 12ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ:
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಆಪ್ತಕಾರ್ಯದರ್ಶಿ ಆಗಿದ್ದ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ವಿಶ್ವನಾಥ ಪಿ. ಹಿರೇಮಠ ಅವರಿಗೆ ಕಿರಿಯ ಶ್ರೇಣಿಯ ಗ್ರೂಪಿಗೆ ಹುದ್ದೆ ನೀಡಿ 2020ರ ಜುಲೈ 13ರಂದು ಡಿಪಿಎಆರ್ ಪ್ರಧಾನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು ಸಿಎಂ ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದರು ಎಂಬ ಕಾರಣಕ್ಕಾಗಿಯೇ ಕಿರಿಯ ಅಧಿಕಾರಿಯಾಗಿದ್ದ ವಿಶ್ವನಾಥ್ಗೆ ಕೆಎಎಸ್ ಹುದ್ದೆ ಕಲ್ಪಿಸಲಾಗಿದೆ. ಅವರ ಸೇವಾವಧಿ ಕಡಿಮೆ ಇದ್ದು, ಕೆಎಎಸ್ ಎ ಗ್ರೂಪ್ ಹುದ್ದೆ ನೀಡಿರುವುದು ಸರಿಯಾದ ಕ್ರಮವಲ್ಲ. ಸೇವಾ ನಿಯಮಗಳನ್ನು ಪಾಲನೆ ಮಾಡಿಲ್ಲ. ಆದ್ದರಿಂದ ಡಿಪಿಎಆರ್ ಪ್ರಧಾನ ಕಾರ್ಯದರ್ಶಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಗೊಳಿಸಬೇಕು ಎಂದು ಕೋರಿದ್ದಾರೆ.