ಬೆಂಗಳೂರು: ಕೆಲವೇ ದಿನಗಳಲ್ಲಿ ರಾಷ್ಟ್ರಪತಿ ಚುನಾವಣೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯ ಶಕ್ತಿ ರೂಪಿಸಲು ಪ್ರಾದೇಶಿಕ ಪಕ್ಷಗಳು ಸಜ್ಜಾಗುತ್ತಿವೆ. ಬಿಜೆಪಿ ಮತ್ತು ಕಾಂಗ್ರೆಸ್ ಗೆ ಪರ್ಯಾಯವಾಗಿ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಸಂಬಂಧ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರರಾವ್ ಅವರು ನಾಳೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ನಾಳೆ ಮಧ್ಯಾಹ್ನ 12.30 ರ ಸುಮಾರಿಗೆ ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಭೇಟಿ ನೀಡಲಿರುವ ಕೆಸಿಆರ್, ಪ್ರಸಕ್ತ ರಾಜಕಾರಣ, ರಾಷ್ಟ್ರಪತಿ ಚುನಾವಣೆ ಹಾಗೂ ಕರ್ನಾಟಕದಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಲು ಡಿಎಂಕೆ, ತೃಣಮೂಲ, ಎಎಪಿ, ಆರ್ ಜೆಡಿ, ಸಮಾಜವಾದಿ ಪಕ್ಷಗಳ ಮುಖ್ಯಮಂತ್ರಿಗಳು ಹಾಗೂ ಆ ಪಕ್ಷಗಳ ನಾಯಕರ ಜೊತೆ ಚಂದ್ರಶೇಖರರಾವ್ ಅವರು ಈಗಾಗಲೇ ಮಾತುಕತೆ ಮುಗಿಸಿದ್ದು, ಇದೀಗ ಪ್ರಾದೇಶಿಕ ಪಕ್ಷಗಳ ಒಗ್ಗೂಡುವಿಕೆಗೆ ಅಂತಿಮ ಸ್ವರೂಪ ನೀಡಲು ದೇವೇಗೌಡರ ಸಹಕಾರ ಕೋರಲು ಭೇಟಿಯಾಗುತ್ತಿರುವುದಾಗಿ ತಿಳಿದುಬಂದಿದೆ.
ಕರ್ನಾಟಕದಲ್ಲಿ ನಡೆದ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರಲು ಗೌಡರಿಗೆ ಬೆಂಬಲ ಸೂಚಿಸಿದ್ದ ಕೆಸಿಆರ್, ಈ ಹಿಂದೆಯೂ ಸಹ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಲು ದೇವೇಗೌಡರ ಜೊತೆ ಚರ್ಚೆ ನಡೆಸಿದ್ದರು.
ಓದಿ : ಪಠ್ಯದಲ್ಲಿ ಸೇರಿಸಿದ್ದರೂ ನನ್ನ ಪಾಠ ಬೋಧಿಸಬೇಡಿ : ದೇವನೂರು ಮಹಾದೇವ ಆಕ್ರೋಶದ ನುಡಿ