ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರ ಸಂಬಂಧಿ ಸಾವಿತ್ರಮ್ಮ ವಿರುದ್ಧ ಕೇತಗಾನಹಳ್ಳಿ ಭೂ ಕಬಳಿಕೆ ಆರೋಪ ಪ್ರಕರಣದ ಕುರಿತು ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಈ ಕುರಿತು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಎ.ಎಸ್. ಓಕ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಆಲಿಸಿತು. ಇನ್ನು ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಭೂ ಒತ್ತುವರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಲೋಕಾಯುಕ್ತ 2014ರ ಆಗಸ್ಟ್ 5ರಂದು ಆದೇಶಿಸಿತ್ತು. ಆದರೆ, ಕೇತಗಾನಹಳ್ಳಿಯಲ್ಲಿ ಒತ್ತುವರಿ ಮಾಡಿರುವ 54 ಎಕರೆ ತೆರವುಗೊಳಿಸಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
2014ರಲ್ಲಿ ಲೋಕಾಯುಕ್ತರು ಹೊರಡಿಸಿದ್ದ ಆದೇಶದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.