ಬೆಂಗಳೂರು: ವಿವಾದಿತ ಫೇಸ್ಬುಕ್ ಪೋಸ್ಟ್ ವಿಚಾರವಾಗಿ ಬೆಂಗಳೂರಿನ ಕೆಜಿ ಹಳ್ಳಿಯಲ್ಲಿ ಗಲಭೆ ಉಂಟಾಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳದಲ್ಲಿ ಹಿಂಸಾಚಾರ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 15ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ.
![KG halli Violence](https://etvbharatimages.akamaized.net/etvbharat/prod-images/kn-bng-10-144-order-extend-7202806_12082020235140_1208f_1597256500_396.png)
ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ- ಕಚೇರಿಗೆ ಬೆಂಕಿ ಹಚ್ಚಿದ್ದ ದುಷ್ಕರ್ಮಿಗಳು ದೊಡ್ಡ ಮಟ್ಟದಲ್ಲಿ ಗಲಭೆ ಮಾಡಿದ್ದರು. ಮಂಗಳವಾರ ರಾತ್ರಿಯಿಂದಲೇ ಗಲಭೆ ಪೀಡಿತ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಗುಪ್ತಚರ ಇಲಾಖೆ ನೀಡಿರುವ ಮಾಹಿತಿಯಂತೆ ಆಗಸ್ಟ್ 15ರವರೆಗೂ ನಿಷೇದಾಜ್ಞೆ ವಿಸ್ತರಣೆ ಮಾಡಲಾಗಿದೆ.
ಯಾವುದೇ ರೀತಿಯ ಪ್ರತಿಭಟನೆ, ಧರಣಿ, ಮುತ್ತಿಗೆ, ಸತ್ಯಾಗ್ರಹ, ಮೆರವಣಿಗೆ ನಡೆಸುವಂತಿಲ್ಲ.ಐದಕ್ಕಿಂತ ಹೆಚ್ಚು ಜನರು ಸೇರುವುದು, ಮೆರವಣಿಗೆ ಅಥವಾ ಸಭೆ ನಡೆಸುವುದು ಹಾಗೂ ಪಟಾಕಿ ಸಿಡಿಸುವುದು ಕಾನೂನುಬಾಹಿರವಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿರುವುದು ಕಂಡು ಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.