ಬೆಂಗಳೂರು: ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾದ ಭೀಮಾ ನಾಯ್ಕ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಸಿಎಂಗೆ ಪಂಚಲೋಹದ ಶ್ರೀಕೃಷ್ಣ ವಿಗ್ರಹ ನೀಡಿ ಧನ್ಯವಾದ ಅರ್ಪಿಸಿದರು. ರೈತ ಸಮುದಾಯದ ಹಿತ ಕಾಪಾಡುವ ರೀತಿಯಲ್ಲಿ ಕ್ರಿಯಾಶೀಲವಾಗಿ ಕರ್ತವ್ಯ ನಿರ್ವಹಿಸಿ ಎಂದು ಇದೇ ವೇಳೆ ಮುಖ್ಯಮಂತ್ರಿಗಳು ಅಧ್ಯಕ್ಷ ಭೀಮಾನಾಯಕ್ ಅವರಿಗೆ ಸೂಚನೆ ನೀಡಿದರು.
ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಅಧ್ಯಕ್ಷ ಹುದ್ದೆಗೆ ಹಗರಿಬೊಮ್ಮನಹಳ್ಳಿಯ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್ ನಿನ್ನೆ ಅವಿರೋಧವಾಗಿ ಆಯ್ಕೆಯಾಗಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಕೆಎಂಎಫ್ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಹೀಗಾಗಿ ಚುನಾವಣೆ ಮೂಲಕ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ತೀರ್ಮಾನಿಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕಾಗಿ ಯಾರು ನಾಮಪತ್ರ ಸಲ್ಲಿಸದೇ ಇರುವುದರಿಂದ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದರು.
ಒಟ್ಟು 14 ಒಕ್ಕೂಟದ ಪ್ರತಿನಿಧಿಗಳು, ಪಶುಸಂಗೋಪನಾ ಇಲಾಖೆ ನಿರ್ದೇಶಕ, ಸಹಕಾರ ಇಲಾಖೆ ರಿಜಿಸ್ಟಾರ್, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಒಬ್ಬರು ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 18 ಮಂದಿ ಮತದಾನ ಹೊಂದಿದ್ದರು. ಆದ್ರೆ, ಭೀಮಾ ನಾಯ್ಕ್ಗೆ ಎದುರಾಳಿಯಾಗಿ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಆಯ್ಕೆ ಸುಗಮವಾಗಿ ಆಗಿದೆ. ಅಧ್ಯಕ್ಷರಾಗಿ ಇನ್ನೂ ಒಂದು ವರ್ಷ ಕಾಲಾವಧಿ ಇದ್ದರೂ, ನಿರ್ದೇಶಕರ ಬೆಂಬಲವಿದ್ದರೂ ಸಹ ಬಾಲಚಂದ್ರ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದರು. ಭೀಮಾನಾಯ್ಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಬಾಕಿ ಉಳಿದಿರುವ ಒಂದು ವರ್ಷದ ಅವಧಿಗೆ ಭೀಮಾನಾಯ್ಕ್ ಅಧ್ಯಕ್ಷರಾಗಿರಲಿದ್ದು, ನಂತರವೂ ಇವರೇ ಮುಂದುವರಿಯುವ ಸಾಧ್ಯತೆಗಳು ಹೆಚ್ಚಿದೆ.
ಹಾಲಿದ ದರ ಹೆಚ್ಚಿಸಲು ಬೇಡಿಕೆ: ಭೀಮಾ ನಾಯ್ಕ್ ಮಾತನಾಡಿ, ನಂದಿನಿ ಹಾಲಿನ ದರ 5 ರೂಪಾಯಿ ಏರಿಸಲು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಿ, ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದ ಎಲ್ಲ ಹಾಲು ಒಕ್ಕೂಟಗಳು 5 ರೂ. ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ. ದರ ಹೆಚ್ಚಳದ ಜೊತೆ ಗುಣಮಟ್ಟದ ಹಾಲು, ಮೊಸರು, ತುಪ್ಪ ಗ್ರಾಹಕರಿಗೆ ಒದಗಿಸಲು ಆದ್ಯತೆ ನೀಡಲಿದ್ದೇವೆ. ರೈತರಿಗೆ 2 ರೂಪಾಯಿ ಪ್ರೋತ್ಸಾಹಧನ ಹೆಚ್ಚಿಸಲಿದ್ದೇವೆ ಎಂದು ತಿಳಿಸಿದ್ದರು. ಇದೇ ನಿಟ್ಟಿನಲ್ಲಿ ದೆಹಲಿ ಪ್ರವಾಸದಿಂದ ಹಿಂದಿರುಗಿದ ಸಿದ್ದರಾಮಯ್ಯರನ್ನು ಭೇಟಿಯಾಗಿ ಸಮಾಲೋಚಿಸಿದ್ದಾರೆ. ವಾರದೊಳಗೆ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ.
ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲು ಒದ್ದಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈಯಿಂದ ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ. ಅದಕ್ಕಾಗಿಯೇ ಈಗ ಹಾಲಿನ ದರ ಹೆಚ್ಚಳಕ್ಕೆ ಮುಂದಾಗಿದ್ದಾರೆ ಎಂದು ಮಾಜಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಆರೋಪಿಸಿದ್ದಾರೆ. ಹಾಲಿನ ದರ ಪರಿಷ್ಕರಣೆ ಕುರಿತು ಸಹಕಾರ ಸಚಿವ ಕೆ. ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್, ನೂತನ ಕೆ.ಎಂ.ಎಫ್ ಅಧ್ಯಕ್ಷ ಭೀಮಾ ನಾಯಕ್ ಒಂದು ಬಾರಿ ಕುಳಿತು ಚರ್ಚೆ ಮಾಡಲಿ. ಈ ತರಹದ ತರಾತುರಿ ನಿರ್ಧಾರಗಳು ಸಾರ್ವಜನಿಕರ ಮೇಲೆ ಎಷ್ಟು ಪ್ರಭಾವ ಬೀರುತ್ತವೆ ಎಂದು ಅರಿತು ನಿರ್ಧರಿಸಲಿ ಎಂದು ಪತ್ರಿಕಾ ಪ್ರಕಟಣೆ ಮೂಲಕ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಇದನ್ನೂಓದಿ: ಶಕ್ತಿ ಯೋಜನೆ ಜಾರಿ ಬಳಿಕ ಸಾರಿಗೆ ಬಸ್ಗಳು ಫುಲ್: ಅಡಕತ್ತರಿಯಲ್ಲಿ ಖಾಸಗಿ ವಾಹನ ಮಾಲೀಕರ ಬದುಕು