ಬೆಂಗಳೂರು: ಇತಿಹಾಸ ಪ್ರಸಿದ್ಧ ಕೊಳದ ಮಠದ ಶಾಂತವೀರ ಸ್ವಾಮೀಜಿ ಹೃದಯಾಘಾತದಿಂದ ಇಂದು ಲಿಂಗೈಕ್ಯರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ವೀರಶೈವ ಲಿಂಗಾಯತ ಸಮುದಾಯದ ಸಂಪ್ರದಾಯದಂತೆ ಸಂಜೆ ಮಠದ ಆವರಣದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.
ಶುಕ್ರವಾರ ಸಂಜೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಶ್ರೀಗಳು ಪಾಲ್ಗೊಂಡಿದ್ದರು. ಆದರೆ, ಇಂದು ಬೆಳಗ್ಗೆ ಹೃದಯಾಘಾತ ಸಂಭವಿಸಿದ್ದರಿಂದ ಕೊನೆಯುಸಿರೆಳೆದರು ಎಂದು ಮಠದ ಮೂಲಗಳು ತಿಳಿಸಿವೆ. ಅಪಾರ ಸಂಖ್ಯೆಯ ಭಕ್ತರನ್ನು ಕೊಳದ ಮಠವು ಹೊಂದಿದ್ದು, ಶ್ರೀಗಳ ಅಂತಿಮ ದರ್ಶನಕ್ಕೆ ಬೆಂಗಳೂರಿನ ಶಾಂತಿನಗರದಲ್ಲಿರುವ ಮಠದ ಆವರಣದಲ್ಲಿ ಅವಕಾಶ ಮಾಡಿಕೊಡಲಾಗಿದೆ. ಗಣ್ಯರು ಶ್ರೀಗಳ ಪಾರ್ಥಿವ ಶರೀರದ ದರ್ಶನ ಪಡೆಯುತ್ತಿದ್ದಾರೆ.
ಯಡಿಯೂರಪ್ಪ ಸಂತಾಪ: ಶಾಂತವೀರ ಸ್ವಾಮೀಜಿಗಳು ಶಿವೈಕ್ಯರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಧರ್ಮಪ್ರಸಾರ, ಸಾಮಾಜಿಕ ಕಾಳಜಿ, ಜನ ಜಾಗೃತಿಗಳಲ್ಲಿ ನಿರತರಾಗಿದ್ದ ಶ್ರೀಗಳ ಅಗಲಿಕೆಯಿಂದ ಸಮಾಜ ಹಿರಿಯ ಗುರುಗಳನ್ನು ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಕೆಪಿಸಿಸಿ ಕಾರ್ಮಿಕ ಘಟಕದ ಅಧ್ಯಕ್ಷ ಎಸ್.ಎಸ್.ಪ್ರಕಾಶಂ ನಿಧನ: ಡಿಕೆಶಿ, ಸಿದ್ದರಾಮಯ್ಯ ಸಂತಾಪ