ಬೆಂಗಳೂರು: ಶಾಸಕ ಪಿ.ಟಿ. ಪರಮೇಶ್ವರ ನಾಯಕ ಪುತ್ರನ ಮದುವೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ನಿಶ್ಚಿತಾರ್ಥ ಸಮಾರಂಭಗಳಲ್ಲಿ ಭಾಗವಹಿಸಿದ್ದವರು ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡಿರಲಿಲ್ಲ. ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಕೀಲರಾದ ಗೀತಾ ಮಿಶ್ರಾ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರಾದ ಜಿ.ಆರ್. ಮೋಹನ್ ವಾದಿಸಿ, ಜನಪ್ರತಿನಿಧಿಗಳ ಮಕ್ಕಳ ಸಮಾರಂಭಗಳಲ್ಲಿ ಸಾಮಾಜಿಕ ಅಂತರ ಉಲ್ಲಂಘಿಸಿರುವ ಕುರಿತು ಪೀಠಕ್ಕೆ ಮಾಹಿತಿ ನೀಡಿ, ದಾಖಲೆಗಳನ್ನು ಸಲ್ಲಿಸಿದರು.
ಮಾಹಿತಿ ಪರಿಗಣಿಸಿದ ಪೀಠ, ಅರ್ಜಿದಾರರ ಪರ ವಕೀಲರು ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿತು. ಈ ಸಂಬಂಧ ಕೈಗೊಂಡ ಕ್ರಮಗಳ ಕುರಿತು ಮುಂದಿನ ಎರಡು ವಾರಗಳ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಿತು. ಹಾಗೆಯೇ ಕಾರ್ಯಕ್ರಮಗಳಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಸೂಚಿಸಿತು.
ಇದೇ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ವಿವರಣೆ ನೀಡಿ, ನಟ ಚಿರಂಜೀವಿ ಸರ್ಜಾ ಅಂತ್ಯ ಸಂಸ್ಕಾರದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದ ವಿಚಾರವಾಗಿ ಹಲವರ ವಿರುದ್ಧ ನೈಸರ್ಗಿಕ ವಿಕೋಪ ನಿರ್ವಹಣಾ ಕಾಯಿದೆ ಅಡಿ ದೂರು ದಾಖಲಿಸಿ, ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ ವಿಚಾರಣೆ ಮುಂದೂಡಿತು.