ಬೆಂಗಳೂರು : ಮೇಕೆದಾಟು ಪಾದಯಾತ್ರೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರ, ಗ್ರಾಮಾಂತರ ಪ್ರದೇಶದ ಹಾಲಿ ಮತ್ತು ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳು ಮತ್ತಿತರ ಮುಖಂಡರ ಜತೆ ಮಂಗಳವಾರ ಸಮಾಲೋಚನೆ ನಡೆಸಿದರು.
ಸಂಸದ ಡಿ.ಕೆ. ಸುರೇಶ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ಮಾಜಿ ಸಚಿವ ಎಚ್.ಎಂ. ರೇವಣ್ಣ, ಶಾಸಕ ರಿಜ್ವಾನ್ ಅರ್ಷದ್, ಸೌಮ್ಯಾರೆಡ್ಡಿ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ಬಿ.ಎಲ್. ಶಂಕರ್, ಎಂ.ಎಲ್ ಸಿಗಳಾದ ಎಸ್. ರವಿ, ನಾರಾಯಣಸ್ವಾಮಿ, ಪಿ.ಆರ್. ರಮೇಶ್ ಮತ್ತಿತರರು ಪಾಲ್ಗೊಂಡಿದ್ದರು.
ಮೇಕೆದಾಟು ಯೋಜನೆಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನಾಯಕರು ಜನವರಿ 9 ರಿಂದ 19ರ ವರೆಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿತ್ತು. ಜನವರಿ 9 ರಂದು ಬೆಳಗ್ಗೆ 9.30ಕ್ಕೆ ಕನಕಪುರ ತಾಲೂಕಿನ ಮೇಕೆದಾಟುವಿನಿಂದ ಆರಂಭವಾಗುವ ಪಾದಯಾತ್ರೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ.
ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಈ ಪಾದಯಾತ್ರೆಯಲ್ಲಿ ವಿವಿಧ ಸಂಘ ಸಂಸ್ಥೆಗಳು, ಸಂಘಟನೆಗಳು ಹಾಗೂ ಸಾರ್ವಜನಿಕರು ಸಹ ಪಾಲ್ಗೊಳ್ಳಬಹುದು ಎಂದು ತಿಳಿಸಲಾಗಿದೆ. ಜನವರಿ 9ರಂದು ಆರಂಭಗೊಳ್ಳುವ ಪಾದಯಾತ್ರೆ ಐದನೇ ದಿನ ಬೆಂಗಳೂರು ನಗರ ತಲುಪಲಿದೆ. ಸರಿ ಸುಮಾರು 100 ಕಿಲೋಮೀಟರ್ ವ್ಯಾಪ್ತಿಯನ್ನು ಯಾತ್ರೆ ಮೂಲಕ ಕ್ರಮಿಸುವ ಕಾಂಗ್ರೆಸ್ ನಾಯಕರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಯೋಜನೆಯನ್ನು ಆದಷ್ಟು ಬೇಗ ಜಾರಿಗೆ ತರುವಂತೆ ಒತ್ತಾಯಿಸಲಿದ್ದಾರೆ. ನಂತರದ ಐದು ದಿನ ಬೆಂಗಳೂರು ನಗರದ ಒಳ ಭಾಗದ ವಿವಿಧ ವಿಧಾನಸಭೆ ಕ್ಷೇತ್ರದಲ್ಲಿ ಪಾದಯಾತ್ರೆ ನಡೆಯಲಿದೆ.
ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕೈಗೊಂಡಿರುವ ಪಾದಯಾತ್ರೆಯ ಸಿದ್ಧತಾ ಸಭೆಗಳನ್ನು ನಡೆಸುತ್ತಿದ್ದಾರೆ. ಇಂದು ಮಂಡ್ಯದಲ್ಲಿ ಸಹ ಒಂದು ಸಭೆ ನಡೆಸಿ ಆಗಮಿಸಿದ ಡಿಕೆಶಿ ಬೆಂಗಳೂರು ನಗರದಲ್ಲಿ ಇನ್ನೊಂದು ಸಭೆ ನಡೆಸಿ ಸುದೀರ್ಘ ಚರ್ಚೆ ನಡೆಸಿದ್ದಾರೆ.