ಬೆಂಗಳೂರು: ಕೇಂದ್ರ ಸಚಿವರು ಕಾನೂನಿಗಿಂತ ದೊಡ್ಡವರೆ? ಕೋವಿಡ್ ಮಾರ್ಗಸೂಚಿ ಇವರಿಗೆ ಅನ್ವಯವಾಗುವುದಿಲ್ಲವೇ? ಬಿಜೆಪಿಯವರಿಗೊಂದು ಕಾನೂನು, ಜನಸಾಮಾನ್ಯರು ಮತ್ತು ಪ್ರತಿ ಪಕ್ಷದವರಿಗೊಂದು ಕಾನೂನು ಇದೆಯೇ? ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿಅವರು ಜನಾಶೀರ್ವಾದ ಯಾತ್ರೆ ನಡೆಸುತ್ತಿರುವ ಕೇಂದ್ರ ಸಚಿವರನ್ನು ಪ್ರಶ್ನಿಸಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಅವರು ಮಾತನಾಡಿದರು. ರಾಜ್ಯದಿಂದ ಆಯ್ಕೆಯಾಗಿರುವ ನಾಲ್ವರು ನೂತನ ಕೇಂದ್ರ ಸಚಿವರು ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದಾರೆ. ಅವರು ಮಾಡಲಿ ಆದರೆ ಕೋವಿಡ್ ಪಿಡುಗು ನಿಯಂತ್ರಣಕ್ಕೆ ವಿಧಿಸಿರುವ ಮಾರ್ಗಸೂಚಿ ಅನ್ವಯವಾಗುವುದಿಲ್ಲವೇ? ಎಂದು ಹರಿಹಾಯ್ದಿದ್ದಾರೆ.
ಕೇಂದ್ರ ಸಚಿವರಾದ ಭಗವಂತ ಖೂಬಾ ಅವರಿಂದ ಹಿಡಿದು, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ನಾರಾಯಣಸ್ವಾಮಿ ಅವರು 700, 800 ಕಿ.ಮೀ ದೂರ ಜನಾಶೀರ್ವಾದ ಯಾತ್ರೆ ಮಾಡಿದ್ದಾರೆ. ಇವರು ಹೋದಲ್ಲೆಲ್ಲಾ ಸಾವಿರಾರು ಜನರನ್ನು ಸೇರಿಸಿಕೊಂಡು ಸಭೆ-ಸಮಾರಂಭ ಮಾಡಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಇವರ ವಿರುದ್ಧ ಪೊಲೀಸರು ಯಾವ ಪ್ರಕರಣವನ್ನು ದಾಖಲಿಸಿಲ್ಲ ಯಾಕೆ? ಎಂದು ರಾಮಲಿಂಗಾರೆಡ್ಡಿ ಪ್ರಶ್ನಿಸಿದರು.
ಇತ್ತೀಚೆಗೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನ ಕಾರ್ಯಕ್ರಮ ಆಚರಿಸಲು ಸರ್ಕಾರ ಅನುಮತಿ ನಿರಾಕರಿಸಿತ್ತು. ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅವರ 300 ಬೆಂಬಲಿಗರ ವಿರುದ್ಧ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಆ ಮೂಲಕ ಬಿಜೆಪಿ ನಾಯಕರು ಕಾನೂನಿಗಿಂತ ದೊಡ್ಡವರು ಎಂಬಂತೆ ಸರ್ಕಾರ ನಡೆದುಕೊಳ್ಳುತ್ತಿದೆ. ಪೊಲೀಸ್ ಅಧಿಕಾರಿಗಳು ಕೂಡ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತೆ ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ: ಕೋವಿಡ್ ನಿಯಮ ಉಲ್ಲಂಘನೆಯನ್ನು ಯಾರೇ ಮಾಡಿದರೂ ದೂರು ದಾಖಲಿಸಬೇಕು. ಆದರೆ, ಸರ್ಕಾರ ಮಾತ್ರ ಬಿಜೆಪಿ ನಾಯಕರು ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸಚಿವ ಖೂಬಾ ಅವರು ಯಾದಗಿರಿಯಲ್ಲಿ ಜನಾಶೀರ್ವಾದ ಯಾತ್ರೆಗೆ ಆಗಮಿಸಿದಾಗ ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತ ಕೋರಲಾಯಿತು. ಆದರೆ, ಈ ಪ್ರಕರಣದಲ್ಲೂ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಇದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಗೃಹಸಚಿವರು ಸಂಪ್ರದಾಯ ಎಂದು ಸಮರ್ಥಿಸಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಎಲ್ಲವೂ ಸಂಪ್ರದಾಯವೇ. ಆದರೆ, ಈ ಮಾರ್ಗಸೂಚಿ, ಕಾನೂನು ಎಲ್ಲ ಯಾಕೆ ಬೇಕು? ಎಲ್ಲವನ್ನು ತೆಗೆದುಹಾಕಿ. ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರು ಗುಂಡು ಹಾರಿಸಿದ ಫೋಟೋ ಮಾಧ್ಯಮಗಳಲ್ಲಿ ಬಂದಿದೆ. ಅವರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ? ಕೆಪಿಸಿಸಿ ಕಾರ್ಯಾಧ್ಯಕ್ಷ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಕಾನೂನು ಇದೆಯೋ, ಇಲ್ಲವೋ?
ಬಿಜೆಪಿ ಸರ್ಕಾರದ ಈ ನಡೆ ನೋಡಿದರೆ, ರಾಜ್ಯದಲ್ಲಿ ಕಾನೂನು ಇದೆಯೋ, ಇಲ್ಲವೋ ಎಂಬ ಪ್ರಶ್ನೆ ಮೂಡುತ್ತಿದೆ. ವಿನಯ್ ಕುಲಕರ್ಣಿ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದು ತಪ್ಪು ಎಂದು ಹೇಳುತ್ತಿಲ್ಲ. ಕಾನೂನು ಉಲ್ಲಂಘನೆ ಮಾಡಿದರೆ ಯಾರೇ ಆಗಲಿ, ನಾವಾದರೂ ನಮ್ಮ ಮೇಲೆ ಕೇಸ್ ಹಾಕಲಿ. ಆದರೆ, ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಮೇಲೆ ಯಾಕೆ ಪ್ರಕರಣ ದಾಖಲಿಸುತ್ತಿಲ್ಲ? ವಿನಯ್ ಕುಲಕರ್ಣಿ ಅವರನ್ನು ಸ್ವಾಗತ ಮಾಡಿರುವುದರ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ ಎಂದರು.
ಅವರ ನಾಯಕರಾದ ಬಿ.ಎಸ್ ಯಡಿಯೂರಪ್ಪ, ಜನಾರ್ದನ ರೆಡ್ಡಿ ಅವರು ಜೈಲಿನಿಂದ ಬಿಡುಗಡೆಯಾದ ಮೇಲೆ ಎರಡು ಕೈಗಳಲ್ಲಿ ವಿಕ್ಟರಿ ಸನ್ನೆ ಮಾಡುತ್ತಾ ಹೊರಬರಲಿಲ್ಲವೇ? ಹಬ್ಬ, ಜಾತ್ರೆ, ಜಾಥಾಗಳಿಗೆ ನಿರ್ಬಂಧ ಹೇರಿರುವ ಸಂದರ್ಭದಲ್ಲಿ ಜನಾಶೀರ್ವಾದ ಯಾತ್ರೆ ನಡೆಸುವುದಕ್ಕೆ ಅನುಮತಿ ನೀಡಲಾಗಿದೆಯೇ? ಅಭಿವೃದ್ಧಿ ಬಗ್ಗೆ ಗಮನಹರಿಸಬೇಕಾದ ಕೇಂದ್ರ ಸಚಿವರು ಯಾವುದೇ ಕೆಲಸ ಮಾಡದೇ ಜನರ ಆಶೀರ್ವಾದ ಪಡೆಯಲು ಮುಂದಾಗಿರುವುದು ದುರಂತ' ಎಂದು ಟೀಕಿಸಿದರು.
ಹೋರಾಟ ಮಾಡುತ್ತೇವೆ: 'ರಾಜ್ಯದಲ್ಲಿ ಮೇಕೆದಾಟು ಯೋಜನೆ ಜಾರಿಗೆ ಯಾವುದೇ ಪ್ರಯತ್ನ ರಾಜ್ಯದಿಂದ ಆಯ್ಕೆಯಾದ ಸಂಸದರಿಂದ ನಡೆಯುತ್ತಿಲ್ಲ. ಕೋವಿಡ್ ಸಂಕಷ್ಟದ ಸಮಯದಲ್ಲಿ ಜನರಿಗೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ಜನರ ಆದಾಯ ಕಡಿಮೆ ಮಾಡಿ, ವೆಚ್ಚ ಹೆಚ್ಚಿಸಿದೆ. ಇದರ ಮಧ್ಯೆ ಅವರು ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದು ಜನ ಅವರಿಗೆ ಆಶೀರ್ವಾದ ಮಾಡಲು ಸಾಧ್ಯವೇ? ಇದು ಜನಾಶೀರ್ವಾದ ಯಾತ್ರೆ ಅಲ್ಲ, ಜನ ವಿರೋಧಿ ಯಾತ್ರೆ. ಸರ್ಕಾರ ಕೂಡಲೇ ಕೋವಿಡ್ ನಿಯಮ ಉಲ್ಲಂಘಿಸಿರುವ ನಾಲ್ವರು ಕೇಂದ್ರ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಇದರ ವಿರುದ್ಧ ಹೋರಾಟ ಮಾಡುತ್ತೇವೆ' ಎಂದು ಎಚ್ಚರಿಕೆ ರವಾನಿಸಿದರು.
ಓದಿ: ಬಿಜೆಪಿ ಜನಾಶೀರ್ವಾದ ಯಾತ್ರೆ ಹಾರ-ತುರಾಯಿಗೆ ಮಾತ್ರ ಸೀಮಿತ : ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ