ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಂದು ನಡೆಯಬೇಕಾಗಿದ್ದ ಎಫ್‌ಡಿಎ ಪರೀಕ್ಷೆ ಮುಂದೂಡಿಕೆಯಾಗಿದ್ದು, ಈ ಸಂಬಂಧ ನಿನ್ನೆ ಕೆಪಿಎಸ್ಸಿ ಮಹತ್ವದ ನಿರ್ಧಾರ ಕೈಗೊಂಡಿದೆ.
ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧ ಶನಿವಾರ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿತ್ತು. ಇಂದು ಎರಡು ಅವಧಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ಕೆಲವರು ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎಫ್‌ಡಿಎ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಸಂಬಂಧ ಲೋಕಾಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧಿಸಿದಂತೆ ಈಗಾಗಲೇ ಸಿಸಿಬಿ ಪೊಲೀಸರು ಚಂದ್ರು, ರಾಚಪ್ಪ ಎಂಬುವರು ಸೇರಿ ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಜೊತೆಗೆ 24 ಲಕ್ಷ ರೂ. ನಗದು ಮತ್ತು 3 ವಾಹನಗಳನ್ನು ಈಗಾಗಲೇ ಆರೋಪಿಗಳಿಂದ ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಬಂಧನವಾಗಿರುವ ಪ್ರಮುಖ ಆರೋಪಿ ಚಂದ್ರು ಕೋರಮಂಗಲದ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ನೌಕರ ಎಂದು ಪ್ರಾಥಮಿಕ ಮಾಹಿತಿಯಿಂದ ಲಭ್ಯವಾಗಿದೆ. ಈತನಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.