ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಏನು ಮಾಡಬೇಕು, ಏನು ಬಿಡಬೇಕು ಎಂಬುದು ಗೊತ್ತಾಗುತ್ತಿಲ್ಲ. ನಾಯಕತ್ವದ ಪೈಪೋಟಿಗಾಗಿ ಇಂತಹ ಆರೋಪ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ವಿಧಾನಸೌಧದಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನವರು ರಾಜಕಾರಣ ಮಾಡುತ್ತಾ ಹೊರಟಿದ್ದಾರೆ. ಇವರು ದಾಖಲೆ ಬಿಡುಗಡೆ ಮಾಡುವುದು ಹೊಸದೇನಲ್ಲ. ಯಾವ ದಾಖಲೆ ಸರಿ ಇದೆ ಅಂತ ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಸಿದ್ದರಾಮಯ್ಯನವರು ಪ್ರತಿಪಕ್ಷದ ನಾಯಕರಾದ ಮೇಲೆ ಅವರಿಗೆ ಕೈ ಕಾಲು ಆಡುತ್ತಿಲ್ಲ. ಕೊರೊನಾ ಸಮಸ್ಯೆ ಇರುವಾಗ ಸರ್ಕಾರದ ಜೊತೆ ಕೈ ಜೋಡಿಸಬೇಕು. ಅದು ಬಿಟ್ಟು ಸುಮ್ಮನೆ ರಾಜಕಾರಣ ಮಾಡುತ್ತಿದ್ದಾರೆ. ನಾಯಕತ್ವದ ಪೈಪೋಟಿಗಾಗಿ ಅವರವರೇ ಆರೋಪ ಮಾಡುತ್ತಿದ್ದಾರೆ ಎಂದರು.
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ನಡುವೆ ನಾಯಕತ್ವಕ್ಕಾಗಿ ಪೈಪೋಟಿ ನಡೆಯುತ್ತಿದೆ. ಅವರು ರಾಜಕಾರಣ ಮಾಡುತ್ತಿದ್ದಾರೆ. ಮೊದಲು ಕೊರೊನಾ ಓಡಿಸೋಣ, ಆ ಮೇಲೆ ರಾಜಕಾರಣ ಮಾಡೋಣ. ಜನ ಸಾಯುತ್ತಿರುವಾಗ ಒಟ್ಟಿಗೆ ಕೆಲಸ ಮಾಡಬೇಕು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸರ್ಕಾರದ ಜೊತೆ ಕೈ ಜೋಡಿಸಬೇಕೆಂದು ಮನವಿ ಮಾಡಿದರು.