ಬೆಂಗಳೂರು: ನಿಯಮ ರೂಪಿಸದೇ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ)ಗೆ ಅಧ್ಯಕ್ಷರನ್ನು ನೇಮಕ ಮಾಡಿರುವ ಸರ್ಕಾರ ಇದೀಗ ತನ್ನ ನಿಲುವು ಸಮರ್ಥಿಸಿಕೊಳ್ಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆದೇಶ ಹಿಂಪಡೆಯವುದಾಗಿ ಹೈಕೋರ್ಟ್ಗೆ ತಿಳಿಸಿದೆ.
ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕ ಪ್ರಶ್ನಿಸಿ ‘ಕಮಿಟಿ ಫಾರ್ ಪಬ್ಲಿಕ್ ಅಕೌಂಟೆಬಿಲಿಟಿ’ ಸಂಸ್ಥೆಯ ಅಧ್ಯಕ್ಷ ಎಸ್. ಶಿವಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಇದನ್ನು ಓದಿ: ತುಮಕೂರು ಬಳಿ ಭೀಕರ ಅಪಘಾತ: 13 ಮಂದಿ ದಾರುಣ ಸಾವು
ಈ ವೇಳೆ ಸರ್ಕಾರದ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಸುಬ್ರಹ್ಮಣ್ಯ ಅವರು ಪೀಠಕ್ಕೆ ಮಾಹಿತಿ ನೀಡಿ, ಕೆಎಸ್ಪಿಸಿಬಿಗೆ ಅಧ್ಯಕ್ಷರನ್ನಾಗಿ ಸುಧೀಂದ್ರ ರಾವ್ ನೇಮಕ ಮಾಡಿರುವ ಆದೇಶವನ್ನು ಹಿಂಪಡೆಯಲು ಸರ್ಕಾರ ಸಿದ್ದವಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ನಿಯಮ ರೂಪಿಸದೇ ಅಧ್ಯಕ್ಷರ ನೇಮಕ ಮಾಡಲಾಗಿದೆ. ಹೀಗಾಗಿ ಸರ್ಕಾರಕ್ಕೂ ತನ್ನ ನಿರ್ಧಾರ ಸಮರ್ಥಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅದರ ಅಧ್ಯಕ್ಷರು ಸೂಕ್ತ ನಿರ್ಧಾರ ಕೈಗೊಳ್ಳುವುದು ಉತ್ತಮ ಎಂದು ಅಭಿಪ್ರಾಯಪಟ್ಟಿತು. ಜತೆಗೆ ಈ ಕುರಿತು ನಿಲುವು ಸ್ಪಷ್ಟಪಡಿಸಲು ಅಧ್ಯಕ್ಷರಿಗೆ ಸೂಚಿಸಿ, ವಿಚಾರಣೆಯನ್ನು ಮಾರ್ಚ್ 18 ಕ್ಕೆ ಮುಂದೂಡಿತು.
ಏನಿದು ಘಟನೆ:
ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಸಂಬಂಧ ಆರು ತಿಂಗಳಲ್ಲಿ ನಿಯಮಗಳನ್ನು ರೂಪಿಸಬೇಕು ಎಂದು 2017ರ ಸೆಪ್ಟೆಂಬರ್ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದೇ ರೀತಿ ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ನಿರ್ದಿಷ್ಟ ನಿಯಮಗಳನ್ನು ರೂಪಿಸುವಂತೆ ಹೈಕೋರ್ಟ್ 2019ರ ಡಿ.22ರಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಆದರೆ, ಈವರೆಗೂ ನಿಯಮ ರೂಪಿಸದ ಸರ್ಕಾರ 2019ರ ಡಿಸೆಂಬರ್ 30ರಂದು ಎಂ. ಸುಧೀಂದ್ರರಾವ್ ಅವರನ್ನು ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ. ನಿಯಮಗಳನ್ನು ರೂಪಿಸದೇ, ಮಂಡಳಿಗೆ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿ ಮಾಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.