ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಇದರಿಂದಾಗಿ ಮಾರ್ಚ್ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಲ್ಪಟ್ಟಿದ್ದವು. ಇದೀಗ ಜೂನ್ 25ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ.
ಇನ್ನು ಎಸ್ಎಸ್ಎಲ್ಸಿ ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ (ಹಾಲ್ ಟಿಕೆಟ್) ತೋರಿಸಿದರೆ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಜೂನ್ 25 ರಿಂದ ಜುಲೈ 4ರವರೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ನಗರ, ಹೊರವಲಯದಲ್ಲಿ ಸಾಮಾನ್ಯ- ವೇಗದೂತ ಬಸ್ಗಳಲ್ಲಿ ಪ್ರಯಾಣಿಸಬಹುದಾಗಿದೆ.
ಇದಲ್ಲದೇ ಜೂನ್ 18 ರಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಇದ್ದು, ಆ ದಿನದಂದೂ ಪ್ರವೇಶ ಪತ್ರದೊಂದಿಗೆ ಉಚಿತವಾಗಿ ಪ್ರಯಾಣಿಸಬಹುದು. ಈ ಸಂಬಂಧ ಈಗಾಗಲೇ ಎಲ್ಲ ಡಿಪೋ ಮ್ಯಾನೇಜರ್ಗಳಿಗೂ ಆದೇಶ ರವಾನಿಸಲಾಗಿದೆ. ವಿದ್ಯಾರ್ಥಿಗಳು ಬಸ್ ಏರುವ ಸ್ಥಳ ಮತ್ತು ಇಳಿಯುವ ಸ್ಥಳ ಕೋರಿಕೆ ಇದ್ದಲ್ಲಿ ಬಸ್ ನಿಲುಗಡೆ ನೀಡಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ.