ಬೆಂಗಳೂರು: ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ರಾಜ್ಯ ವಿಧಾನ ಸಭೆ ಚುನಾವಣೆ ನಡೆದು 2.5 ತಿಂಗಳು ಕಳೆಯುತ್ತಾ ಬಂದರೂ ಪ್ರತಿಪಕ್ಷ ನಾಯಕ ಯಾರು ಎಂಬುದನ್ನು ಬಿಜೆಪಿ ನಿರ್ಧರಿಸಿಲ್ಲ. ಇದು ಕಾಂಗ್ರೆಸ್ನವರ ಟೀಕೆಗೂ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಪ್ರತಿಪಕ್ಷ ಸ್ಥಾನ ಸೇರಿದಂತೆ ರಾಜ್ಯಾಧ್ಯಕ್ಷ ಹಾಗೂ ಇನ್ನಿತರ ಪ್ರಮುಖ ಹುದ್ದೆಗಳನ್ನು ತುಂಬಲು ನಿರ್ಧರಿಸಿದೆ.
ಈಗಾಗಲೇ ಹೈಕಮಾಂಡ್, ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪ್ರಸ್ತುತ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಈ ವರ್ಷದ ಜನವರಿಯಲ್ಲಿ ಕೊನೆಗೊಂಡಿತ್ತು. ಆದರೆ, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರನ್ನು ಅದೇ ಸ್ಥಾನದಲ್ಲಿ ಮುಂದುವರೆಸಲಾಗಿತ್ತು.
ಹೈಕಮಾಂಡ್ ಈ ನಿರ್ಧಾರಕ್ಕೆ ಇಂಬು ನೀಡುವಂತೆ ಸಿ ಟಿ ರವಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದರು. ಈ ನಡುವೆ ಸಿಟಿ ರವಿ ಅವರು ಇಂದು ದೆಹಲಿಗೆ ತೆರಳುವ ಸಾಧ್ಯತೆ ಇದೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವು ಶೀಘ್ರದಲ್ಲೇ ರಾಜ್ಯಾಧ್ಯಕ್ಷರ ಹೆಸರನ್ನು ಘೋಷಣೆ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯಾಧ್ಯಕ್ಷರ ನೇಮಕ ಘೋಷಣೆಯಾದ ಬಳಿಕ ವಿಧಾನಸಭೆ ಹಾಗೂ ಪರಿಷತ್ತಿನಲ್ಲಿ ಪ್ರತಿಪಕ್ಷ ನಾಯಕರನ್ನು ಪಕ್ಷ ನೇಮಿಸಲಿದೆ ಎಂದೂ ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಇನ್ನು ಪ್ರತಿಪಕ್ಷದ ನಾಯಕರನ್ನಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಪಕ್ಷ ನೇಮಿಸಲಿದೆ ಎಂದು ಮೂಲಗಳು ತಿಳಿಸಿವೆ. ಈ ಸ್ಥಾನಕ್ಕೆ ಕಟ್ಟಾ ಹಿಂದುತ್ವವಾದಿ, ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಅವರ ಉಮೇದುವಾರಿಕೆಯನ್ನೂ ಪಕ್ಷ ಪರಿಗಣಿಸುತ್ತಿದೆ ಎಂದು ಹೇಳಲಾಗಿದೆ.
ಬಿಎಸ್ವೈ ಪುತ್ರ ಶಾಸಕ ಬಿ ವೈ ವಿಜಯೇಂದ್ರಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲು ಹೈಕಮಾಂಡ್ ಚಿಂತನೆ ನಡೆಸಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕೆಲ ದಿನಗಳ ಹಿಂದೆ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ನಡುವೆ, ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಹತ್ವದ ಜವಾಬ್ದಾರಿ ನೀಡಲು ಪಕ್ಷ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿ:ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲ: ನಳಿನ್ ಕುಮಾರ್ ಆರೋಪ