ರಾಮನಗರ, ಶಿರಸಿ, ಬಾಗಲಕೋಟೆ, ಚಿಕ್ಕಮಗಳೂರು, ಗದಗ, ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ರೈತರು ಪಾಲ್ಗೊಂಡು ದೋಸ್ತಿ ಸರ್ಕಾರದ ವಿರುದ್ಧ ಕಿಡಿಕಾರಿದರು.
ರಾಮನಗರ : ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದ ರೈತರು, ರಾಮನಗರದ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ರೈತ ಸಂಘದ ಮುಖಂಡ ಲಕ್ಷ್ಮಣಸ್ವಾಮಿ ನೇತೃತ್ವದಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ಬಂದ್ ಮಾಡಿದ ರೈತರು, ಕಾಯ್ದೆ ವಾಪಸ್ ಪಡೆಯದಿದ್ದರೆ ಧರಣಿ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಶಿರಸಿ: ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಉತ್ತರ ಕನ್ನಡ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿಯೂ ಭೂ ಸ್ವಾಧೀನ ಕಾಯ್ದೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಯ ಅಂಗವಾಗಿ ತಾಲೂಕಿನ ಬಿಸ್ಲಕೊಪ್ಪದಲ್ಲಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರೋಧಿ ನೀತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಾಗಲಕೋಟೆ: ಕಾಯ್ದೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ನಗರದಲ್ಲಿಯೂ ಪ್ರತಿಭಟನೆ ನಡೆಸಲಾಯಿತು. ರಾಜ್ಯ ರೈತ ಸಂಘದ ವತಿಯಿಂದ ಇಳಕಲ್ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಹೆದ್ದಾರಿ 50ಅನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ರಸ್ತೆ ಬಂದ್ ಮಾಡಿದ ಪರಿಣಾಮ ಪ್ರಯಾಣಿಕರು ಪರದಾಡುವಂತಾಯಿತು. ಪ್ರತಿಭಟನೆಯಲ್ಲಿ ಇಳಕಲ್ನ ವಿಜಯ ಮಹಾಂತೇಶ್ವರ ಮಠದ ಶ್ರೀಗಳು ಹಾಗೂ ಹಲವಾರು ರೈತ ಮುಖಂಡರು ಭಾಗಿಯಾಗಿದ್ದರು.
ಚಿಕ್ಕಮಗಳೂರು : ಭೂ ಸ್ವಾಧೀನ ಕಾಯ್ದೆ ವಿರೋಧಿಸಿ ಚಿಕ್ಕಮಗಳೂರಿನ ರೈತ ಸಂಘಟನೆಯಿಂದ ಪ್ರತಿಭಟನೆ ಮಾಡಲಾಗಿದೆ. ನಗರದ ಎಐಟಿ ವೃತ್ತದಲ್ಲಿ ನೂರಾರು ರೈತರು ರಾಷ್ಟ್ರೀಯ ಹೆದ್ದಾರಿ ತೆಡೆದು ಪ್ರತಿಭಟನೆ ನಡೆಸಿದರು. ಇದೇ ವೇಳೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು. ರಸ್ತೆ ತಡೆ ನೆಡೆಸಿದ ಪರಿಣಾಮ ಸಾಕಷ್ಟು ಟ್ರಾಫಿಕ್ ಜಾಮ್ ಉಂಟಾಯಿತು. ಇನ್ನು ಪ್ರತಿಭಟನೆ ಹತ್ತಿಕ್ಕಲು 50 ಕ್ಕೂ ಹೆಚ್ಚು ರೈತರನ್ನು ಪೊಲೀಸರು ಬಂಧಿಸಿದರು.
ಗದಗ: ಇನ್ನು ರಾಜ್ಯ ಸರ್ಕಾರದ ವಿರುದ್ಧ ಗದಗದಲ್ಲಿಯೂ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದರು. ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದರ ಮೂಲಕ ಆಕ್ರೋಶ ಹೊರಹಾಕಿದರು. ಇನ್ನು ಟಿಪ್ಪು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ರೈತರು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಕೂಡಲೇ ರಾಜ್ಯ ಸರ್ಕಾರ ಭೂ ಸ್ವಾಧೀನ ಕಾಯ್ದೆಯನ್ನು ಕೈಬಿಡಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಉಗ್ರ ಹೊರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ದಾವಣಗೆರೆ: ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಜಿಲ್ಲೆಯಲ್ಲಿಯೂ ನೂರಾರು ರೈತರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಏನಾದರೂ ನಮ್ಮ ಗ್ರಾಮದ ಬಳಿ ಬಂದರೆ ಕಟ್ಟಿ ಹಾಕುವುದಾಗಿ ಎಚ್ಚರಿಕೆ ನೀಡಿದರು. ತಾಲೂಕಿನ ಮಲ್ಲಶೇಟ್ಟಿಹಳ್ಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು, ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸವಂತೆ ಒತ್ತಾಯ ಮಾಡಿದರು. ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು.