ಬೆಂಗಳೂರು: ವಕೀಲ ಕೇಶವಮೂರ್ತಿ ಪುತ್ರ ವಕೀಲ ಅಮಿತ್ ಕೇಶವಮೂರ್ತಿ ಕೊಲೆ ಪ್ರಕರಣದ ಅಪರಾಧಿ ರಾಜೇಶ್ ಗೌಡ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರು ಗ್ರಾಮಾಂತರ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ಆರೋಪಿಯನ್ನು ದೋಷಿ ಎಂದು ಬುಧವಾರ ತೀರ್ಪು ನೀಡಿದ್ದ ನ್ಯಾಯಾಧೀಶ ಹೊಸಮನಿ ಪುಂಡಲೀಕ ಅವರು ಗುರುವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದು, 1 ಲಕ್ಷ ರೂ.ಗಳ ದಂಡ ವಿಧಿಸಿ ಆದೇಶಿಸಿದ್ದಾರೆ.
ಅಲ್ಲದೇ, ಭಾರತೀಯ ದಂಡ ಸಂಹಿತೆ 1860ರ ಕಲಂ 302ರ ಅಡಿ ಜೀವಾವಧಿ ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಕಲಂ 30ರ ಅಡಿ 4 ತಿಂಗಳ ಸಾಧಾರಣ ಜೈಲು ಶಿಕ್ಷೆ ಹಾಗೂ 2 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಜೊತೆಗೆ 1 ಲಕ್ಷ ರೂಪಾಯಿ ದಂಡ ಪಾವತಿಸಲು ತಪ್ಪಿದಲ್ಲಿ 1 ವರ್ಷ ಸಾಧಾರಣ ಜೈಲು ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ತೀರ್ಪಿನಲ್ಲಿ ಆದೇಶ ನೀಡಿದ್ದಾರೆ.
ಪ್ರಕರಣದ ಹಿನ್ನೆಲೆ?: ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆಚಾರ್ಯ ಎಂಜಿನಿಯರಿಂಗ್ ಕಾಲೇಜು ಬಳಿ 2017ರ ಜನವರಿ 13 ರಂದು ಮಧ್ಯಾಹ್ನ 3.15ರ ವೇಳೆ ಅಮಿತ್ ಕೇಶವಮೂರ್ತಿ ಅವರು ಆರೋಪಿ ರಾಜೇಶ್ ಅವರ ಪತ್ನಿ ಪಿಡಿಒ ಶ್ರುತಿಗೌಡ ಅವರೊಂದಿಗೆ ಸ್ವಿಫ್ಟ್ ಕಾರಿನಲ್ಲಿ ಕುಳಿತಿದ್ದರು. ಶ್ರುತಿ ಗೌಡ ಅವರಿಗೆ ಸೇರಿದ ಈ ಕಾರು ಹಿಂಬಾಲಿಸಿಕೊಂಡು ಬಂದಿದ್ದ ರಾಜೇಶ್, ಕಾರಿನ ಬಾಗಿಲು ತೆರೆದು ತಮ್ಮ ಬಳಿ ಇದ್ದ ಪಿಸ್ತೂಲಿನಿಂದ ಅಮಿತ್ ಕೇಶವಮೂರ್ತಿ ಮೇಲೆ ಏಕಾಏಕಿ ಗುಂಡು ಹಾರಿಸಿ ಕೊಂದಿದ್ದರು.
ಶ್ರುತಿ ಗೌಡ ಅವರ ನಡೆ ಮತ್ತು ಚಟುವಟಿಕೆಗಳ ಮೇಲೆ ಸದಾ ಸಂಶಯ ವ್ಯಕ್ತಪಡಿಸುತ್ತಿದ್ದ ರಾಜೇಶ್, ಶ್ರುತಿ ಬಳಸುವ ಕಾರಿಗೆ ಜಿಪಿಎಸ್ ಅಳವಡಿಸಿ ಅದರ ಮುಖಾಂತರ ಅವರಿದ್ದ ಸ್ಥಳಕ್ಕೆ ಹಿಂಬಾಲಿಸಿಕೊಂಡು ಬಂದಿದ್ದರು. ಅಮಿತ್ ಮೃತಪಟ್ಟ ಸುದ್ದಿ ತಿಳಿದ ನಂತರ ಶ್ರುತಿ ಗೌಡ ಲಾಡ್ಜ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ವಿವರಿಸಲಾಗಿದೆ.
ಈ ಪ್ರಕರಣದ ಮತ್ತೊಬ್ಬ ಆರೋಪಿಯಾಗಿದ್ದ ರಾಜೇಶ್ ತಂದೆ ಗೋಪಾಲಕೃಷ್ಣ (82) ವಿಚಾರಣೆಗೂ ಮುನ್ನವೇ ಸಾವನ್ನಪ್ಪಿದ್ದರು. ಅಮಿತ್ ಕೇಶವಮೂರ್ತಿ ವಕೀಲರಾಗಿದ್ದು, ನೆಲಮಂಗಲ ಮತ್ತು ಬೆಂಗಳೂರು ನಗರದಲ್ಲಿ ವಕೀಲಿಕೆ ನಡೆಸುತ್ತಿದ್ದರು. ಪ್ರಕರಣದಲ್ಲಿ ಸರ್ಕಾರದ ಪರ ವಿಶೇಷ ಪ್ರಾಸಿಕ್ಯೂಟರ್ ಆಗಿ ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ವಾದ ಮಂಡಿಸಿದ್ದರು.
ಇದನ್ನೂ ಓದಿ: ವಕೀಲ ಅಮಿತ್ ಕೇಶವಮೂರ್ತಿ ಕೊಲೆ ಪ್ರಕರಣ : ರಾಜೇಶ್ ಗೌಡ ದೋಷಿ ಎಂದ ನ್ಯಾಯಾಲಯ