ಬೆಂಗಳೂರು: ರಾಜ್ಯದ ಎಲ್ಲಾ ಶಿಕ್ಷಕರಿಗೆ ನೀಡಲಾಗಿದ್ದ ರಜೆಯನ್ನು ಏಪ್ರಿಲ್ 11ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇಂದು ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ತೆಗೆದುಕೊಂಡಿರುವ ನಿರ್ಧಾರಗಳನ್ನು ಫೇಸ್ಬುಕ್ಲೈವ್ಗೆ ಬಂದು ತಿಳಿಸಿದ್ದಾರೆ. ಕೆಲ ಖಾಸಗಿ ಶಾಲೆಗಳು 2020-21 ನೇ ಸಾಲಿನ ಶುಲ್ಕ ವಸೂಲಾತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಿ ಪೋಷಕರಿಗೆ ಅನಗತ್ಯ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಈ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ, 2020-21ನೇ ಸಾಲಿನ ದಾಖಲಾತಿ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಯಾವುದೇ ಶಾಲೆ ದಾಖಲಾತಿ ಪ್ರಕ್ರಿಯೆಯನ್ನು ನಿರ್ವಹಿಸತಕ್ಕದ್ದಲ್ಲ. ಈಗಾಗಲೇ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪೋಷಕರಿಂದ ಶುಲ್ಕ ವಸೂಲಾತಿ ಮಾಡತಕ್ಕದ್ದಲ್ಲ ಎಂಬ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಬಗ್ಗೆ ಶಾಲಾ ಆಡಳಿತ ಮಂಡಳಿಗಳು ಪೋಷಕರಿಗೆ ಈಗಾಗಲೇ ಸೂಚನೆ ನೀಡಿದ್ದಲ್ಲಿ ಇಂತಹ ಸೂಚನೆಗಳನ್ನು ಕೂಡಲೇ ಹಿಂಪಡೆಯಬೇಕು. ಸರ್ಕಾರದ ಮುಂದಿನ ಆದೇಶದವರೆಗೆ ಮುಂದೂಡಬೇಕು. ಒಂದು ವೇಳೆ ಯಾವುದೇ ಶಾಲೆಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸಿದಲ್ಲಿ, ಅಂತಹ ಶಾಲಾ ಆಡಳಿತ ಮಂಡಳಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದಲ್ಲದೇ, ಸಂಬಂಧಿಸಿದ ಶಾಲೆಗಳ ಮಾನ್ಯತೆ ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವುದಾಗಿ ಖಡಕ್ ಸಂದೇಶ ರವಾನಿಸಿದ್ದಾರೆ.