ಬೆಂಗಳೂರು : ವಿಧಾನಪರಿಷತ್ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ನ ಮೂವರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಬೋಸರಾಜ್ ಮತ್ತು ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದರು. ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಎಂ.ಬಿ. ಪಾಟೀಲ್, ಮಧು ಬಂಗಾರಪ್ಪ ಮತ್ತಿತರರು ಉಪಸ್ಥಿತರಿದ್ದರು.
ಮುಂದೆ ಯಾವ ಸ್ಥಾನ ಕೊಟ್ಟರೂ ನಿಭಾಯಿಸುತ್ತೇನೆ: ಬಳಿಕ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನಾವು ಮೂರು ಜನ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ ಶಿವಕುಮಾರ್, ಸಚಿವರು ಉಪಸ್ಥಿತರಿದ್ದರು. ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ ಅವರಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ಹೇಳಿದರು. ನಾವು ಮೂರು ಜನ ಗೆದ್ದು ಬರುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲೋಕೆ ಶ್ರಮ ಪಡುತ್ತೇವೆ. ಯಾವುದೇ ಸ್ಥಾನಮಾನ ಕೇಳಿಲ್ಲ. ಮುಂದೆ ಯಾವುದೇ ಸ್ಥಾನಮಾನ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಇದೇ ವೇಳೆ ಶೆಟ್ಟರ್ ಹೇಳಿದರು.
![legislative-council-by-election-nomination-filed-by-congress-candidates](https://etvbharatimages.akamaized.net/etvbharat/prod-images/20-06-2023/18800422_thumb.jpg)
ಇದನ್ನೂ ಓದಿ : Council Election: ವಿಧಾನಪರಿಷತ್ ಚುನಾವಣೆಗೆ ಕೈ ಅಭ್ಯರ್ಥಿಗಳ ಘೋಷಣೆ; ಜಗದೀಶ್ ಶೆಟ್ಟರ್‌ಗೆ ಟಿಕೆಟ್
ಚುನಾವಣಾ ಪ್ರಕ್ರಿಯೆ : ಕಳೆದ ಜೂನ್ 13ರಂದು ವಿಧಾನ ಪರಿಷತ್ ಮೂರು ಸ್ಥಾನಗಳ ಉಪಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಇಂದು (ಜೂನ್ 20) ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜೂನ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್ 23 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ನಿಗದಿಪಡಿಸಲಾಗಿದೆ. ವಿಧಾನಸಭೆ ಶಾಸಕರ ಸಂಖ್ಯಾಬಲದ ಆಧಾರದ ಮೇಲೆ ಮೂವರನ್ನು ಗೆಲ್ಲಿಸಿಕೊಳ್ಳುವುದು ಕಾಂಗ್ರೆಸ್ಗೆ ಸುಲಭವಾಗಿದೆ. ಸೋಲುವುದು ಖಚಿತ ಎಂಬ ಹಿನ್ನೆಲೆ ಬೇರೆ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ.
ಜೂನ್ 30 ರಂದು ಬೆಳಗ್ಗೆ 9 ರಿಂದ ಸಂಜೆ 4 ರ ವರೆಗೆ ವಿಧಾನಸಭಾ ಸದಸ್ಯರು ಮತ ಚಲಾಯಿಸುವ ಮೂಲಕ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದ್ದು, ಜುಲೈ 4ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ.
ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ತೊರೆದಿದ್ದ ಬಾಬುರಾವ್ ಚಿಂಚನಸೂರು, ಆರ್. ಶಂಕರ್ ಮತ್ತು ಲಕ್ಷ್ಮಣ ಸವದಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇವರಿಂದ ತೆರವಾದ ಮೂರು ಸ್ಥಾನಗಳಿಗೆ ಇದೀಗ ಚುನಾವಣೆ ನಡೆಸಲಾಗುತ್ತಿದೆ. ಈ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಅವಿರೋಧ ಆಯ್ಕೆ ನಿಶ್ಚಿತವಾಗಿದೆ.
ಇದನ್ನೂ ಓದಿ : ಪರಿಷತ್ ಚುನಾವಣೆ: 3 ಸ್ಥಾನಗಳಲ್ಲೂ ಕಾಂಗ್ರೆಸ್ಗೆ ಜಯ, ಬಿಜೆಪಿಗೆ ಶೂನ್ಯ ಸಾಧ್ಯತೆ