ಬೆಂಗಳೂರು : ರಾಜ್ಯ ವಿಧಾನಸಭೆ ಪ್ರತಿನಿಧಿಗಳಿಂದ ವಿಧಾನಪರಿಷತ್ನ ಖಾಲಿ ಇರುವ 3 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರಗೊಂಡಿರುವುದಾಗಿ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಎನ್ ಎಸ್ ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರು ಅವರು ನಾಮಪತ್ರ ಸಲ್ಲಿಸಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಡಾ. ಕೆ ಪದ್ಮರಾಜನ್ ಅವರ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದೆ ಎಂದು ವಿಧಾನಸಭಾ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಹಾಗೂ ಜೆಡಿಎಸ್ ನಿಂದ ಅಭ್ಯರ್ಥಿಗಳನ್ನು ಹಾಕಿರಲಿಲ್ಲ. ಹಾಗಾಗಿ, ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ನ ಮೂವರು ಅಭ್ಯರ್ಥಿಗಳ ನಾಮಪತ್ರ ಅಂಗೀಕಾರವಾಗಿದೆ. ಮೂವರು ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು, ಇನ್ನೂ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಸಿಎಂ, ಡಿಸಿಎಂ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು : ಜೂನ್ 30ರಂದು ನಡೆಯಲಿರುವ ವಿಧಾನಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ನ ಮೂವರು ಅಭ್ಯರ್ಥಿಗಳು ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಬೋಸರಾಜ್ ಮತ್ತು ತಿಪ್ಪಣ್ಣಪ್ಪ ಕಮಕನೂರು ಅವರು ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ. ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಎಂ. ಬಿ. ಪಾಟೀಲ್, ಮಧು ಬಂಗಾರಪ್ಪ ಮತ್ತಿತರರು ಉಪಸ್ಥಿತರಿದ್ದರು.
ಯಾವುದೇ ಸ್ಥಾನಮಾನ ಕೇಳಿಲ್ಲ : ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನಾವು ಮೂರು ಜನ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ ಶಿವಕುಮಾರ್, ಸಚಿವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದೇವೆ. ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾವು ಮೂವರೂ ಉಪಚುನಾವಣೆಯಲ್ಲಿ ಗೆದ್ದು ಬರುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಶ್ರಮ ಪಡುತ್ತೇವೆ. ಯಾವುದೇ ಸ್ಥಾನಮಾನ ಕೇಳಿಲ್ಲ. ಮುಂದೆ ಯಾವುದೇ ಸ್ಥಾನಮಾನ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಶೆಟ್ಟರ್ ಹೇಳಿದ್ದರು.
ಇದೀಗ ಜಗದೀಶ್ ಶೆಟ್ಟರ್ಗೆ ನಿರೀಕ್ಷೆಯಂತೆ ವಿಧಾನ ಪರಿಷತ್ ಸ್ಥಾನ ಖಚಿತವಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಅದರಲ್ಲೂ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಯಾವ ರೀತಿ ರಣತಂತ್ರ ರೂಪಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ : ವಿಧಾನಪರಿಷತ್ ಉಪಚುನಾವಣೆಗೆ ಮೂವರು ಕೈ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ.. ಯಾವ ಸ್ಥಾನ ಕೊಟ್ಟರೂ ನಿಭಾಯಿಸುತ್ತೇನೆ: ಜಗದೀಶ್ ಶೆಟ್ಟರ್