ಬೆಂಗಳೂರು : ರಾಜ್ಯ ಹೈಕೋರ್ಟ್ನಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಹ ವಕೀಲರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಪರಿಗಣಿಸುವಂತೆ ಬೆಂಗಳೂರು ವಕೀಲರ ಸಂಘ(ಎಎಬಿ) ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದೆ. ಈ ಕುರಿತು ಎಎಬಿ ಅಧ್ಯಕ್ಷರಾದ ಎ.ಪಿ ರಂಗನಾಥ್ ಅವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಾರೆ.
ಸುಪ್ರೀಂಕೋರ್ಟ್ ವಕೀಲರು ಹೆಚ್ಚು ವೃತ್ತಿಪರರಾಗಿದ್ದು ಅವರನ್ನು ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗಳಿಗೆ ನೇಮಿಸುವ ಸಂಬಂಧ ಸಿಜೆಐ ಸಮ್ಮತ ಸೂಚಿಸಿದ್ದಾರೆ ಎಂದು ಸುಪ್ರೀಂಕೋರ್ಟ್ ವಕೀಲರ ಸಂಘದ ಅಧ್ಯಕ್ಷ ವಿಕಾಸ್ ಸಿಂಗ್ ಹೇಳಿಕೆ ಬೆನ್ನಲ್ಲೇ ಎಎಬಿ ಈ ಪತ್ರ ಬರೆದಿದೆ. ಹತ್ತು ವರ್ಷ ಹೈಕೋರ್ಟ್‌ಗಳಲ್ಲಿ ಸೇವೆ ಸಲ್ಲಿಸಿರುವ ಅನುಭವಿ ವಕೀಲರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಕ್ರಮ ಕೈಗೊಳ್ಳಬೇಕು ಎಂದು ಕೋರಲಾಗಿದೆ.
ಅಲ್ಲದೇ, ಸಂವಿಧಾನದ 124ನೇ ವಿಧಿಯ ಅನ್ವಯ ಮತ್ತು ವಿವಿಧ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಗಳನ್ನು ಆಧರಿಸಿ ಕರ್ನಾಟಕ ಹೈಕೋರ್ಟ್ ಸೇರಿದಂತೆ ವಿವಿಧ ಹೈಕೋರ್ಟ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಕೀಲರನ್ನು ಕೂಡ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಅವಕಾಶವಿದೆ. ಅದರಂತೆ, ಕರ್ನಾಟಕ ಹೈಕೋರ್ಟ್ನ ವಕೀಲರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ತಾವು ಮುಂದಾಗಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.