ಬೆಂಗಳೂರು : ಪಶ್ಚಿಮಘಟ್ಟದಲ್ಲಿ ಹರಿಯುವ ಅಘನಾಶಿನಿ ನದಿ ಸಂರಕ್ಷಣೆ ವಿಚಾರವಾಗಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸುವ ಕುರಿತು ಅಗತ್ಯ ಕ್ರಮಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ (ಕೆಎಸ್ಎಲ್ಎಸ್ಎ) ಹೈಕೋರ್ಟ್ ಕಾನೂನು ಸೇವಾ ಸಮಿತಿಗೆ ಪತ್ರ ಬರೆದಿದೆ.
ಅಘನಾಶಿನಿ ನದಿ ಪಾತ್ರದ ಗ್ರಾಮಗಳಲ್ಲಿ ಅಕ್ರಮ ಮರಳು, ಚಿಪ್ಪು ಗಣಿಗಾರಿಕೆ ಸೇರಿದಂತೆ ಪರಿಸರ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಆದ್ದರಿಂದ ನದಿ ಸಂರಕ್ಷಿಸುವ ಕುರಿತು ಕ್ರಮಕೈಗೊಳ್ಳುವಂತೆ ಹಾಗೂ ಹೈಕೋರ್ಟ್ನಲ್ಲಿ ಪಿಐಎಲ್ ದಾಖಲಿಸುವಂತೆ ಕೋರಿ ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲ ಭೀಮನಗೌಡ ಕೆಎಸ್ಎಲ್ಎಸ್ಎಗೆ ಕೋರಿದ್ದರು.
ವಕೀಲರ ಮನವಿ ಪರಿಗಣಿಸಿರುವ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸಹಾಯಕ ಕಾರ್ಯದರ್ಶಿ ಹೈಕೋರ್ಟ್ ಕಾನೂನು ಸೇವಾ ಸಮಿತಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ಅರ್ಜಿದಾರರ ಮನವಿ ಪರಿಶೀಲಿಸಿ ಹೈಕೋರ್ಟ್ನಲ್ಲಿ ನದಿ ಸಂರಕ್ಷಣೆ ಕುರಿತು ಸಾರ್ವಜನಿ ಹಿತಾಸಕ್ತಿ ಅರ್ಜಿ ದಾಖಲಿಸುವ ಕುರಿತು ಸೂಕ್ತ ಕ್ರಮಕೈಗೊಳ್ಳುವಂತೆ ಹಾಗೂ ಕೈಗೊಂಡ ಕ್ರಮದ ವರದಿಯನ್ನು ಪ್ರಾಧಿಕಾರಕ್ಕೆ ತಿಳಿಸುವಂತೆ ಪತ್ರದಲ್ಲಿ ಸೂಚಿಸಲಾಗಿದೆ.
ಅಘನಾಶಿಸಿ ನದಿ ಪಾತ್ರದಲ್ಲಿ ಅಕ್ರಮ ಮರಳು, ಚಿಪ್ಪು ಗಣಿಗಾರಿಕೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಿದ್ದು, ನದಿ ಕಲುಷಿತವಾಗುತ್ತಿದೆ. ಇದನ್ನು ನಿಯಂತ್ರಿಸಬೇಕಾದ ಸಂಬಂಧಪಟ್ಟ ಪ್ರಾಧಿಕಾರಗಳು ನಿಷ್ಕ್ರಿಯವಾಗಿರುವ ಹಿನ್ನೆಲೆ ವಕೀಲ ಭೀಮನಗೌಡ ಕೆಎಸ್ಎಲ್ಎಸ್ಎಗೆ ಪತ್ರ ಬರೆದಿದ್ದರು.
ಇದನ್ನೂ ಓದಿ: ಸರ್ಕಾರಿ ಶಾಲೆಗಳಲ್ಲಿ ನಿಗದಿಪಡಿಸಿದ ಸಮವಸ್ತ್ರ ಬಳಕೆ ಕಡ್ಡಾಯಗೊಳಿಸಿ ಸರ್ಕಾರದ ಖಡಕ್ ಆದೇಶ