ಬೆಂಗಳೂರು: ರಾಜ್ಯದಲ್ಲಿ ಯಾವೆಲ್ಲ ಪ್ರದೇಶಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ ಅರಣ್ಯ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿದೆ.
ವಾಣಿ ವಿಲಾಸ ಸಿಮೆಂಟ್ ಪೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ಥೆ ಮತ್ತು ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ನಡೆಸಿತು.
ವಿಚಾರಣೆ ವೇಳೆ ಹಲವು ಪ್ರಕರಣಗಳಲ್ಲಿ ನಿಯಮಬಾಹಿರವಾಗಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಗಣಿ ಇಲಾಖೆ ಪರವಾನಿಗೆ ನೀಡಿದೆ. ಆದರೆ, ಈ ವಿಚಾರ ಅರಣ್ಯ ಇಲಾಖೆಗೆ ತಿಳಿದೇ ಇಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. ಹೀಗಾಗಿ, ರಾಜ್ಯದಲ್ಲಿ ಯಾವೆಲ್ಲ ಕಡೆ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಲೈಸನ್ಸ್ ನೀಡಲಾಗಿತ್ತು ಎಂಬ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಬೇಕು. ಈ ಕುರಿತ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಮಾ.31ಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ, ಅರಣ್ಯ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿರುವ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿ ಆದೇಶ ಹೊರಡಿಸುವುದಾಗಿ ಪೀಠ ಹೇಳಿತ್ತು. ಅಂತಿಮವಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಕುರಿತು ತನಿಖೆಗೆ ನಿರ್ದೇಶಿಸಿ ಆದೇಶ ಹೊರಡಿಸಿತು.
ತಪ್ಪಾಗಿರುವುದು ನಿಜ: ವಿಚಾರಣೆ ವೇಳೆ ಸರ್ಕಾರಿ ವಕೀಲರು ವಾದ ಮಂಡಿಸಿ, ಅರ್ಜಿದಾರರಿಗೆ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದ್ದು ನಿಜ. ಆದರೆ, ಆ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತಂದಿರಲಿಲ್ಲ. ಆನಂತರ ಜಾಗ ಅರಣ್ಯ ಇಲಾಖೆಗೆ ಸೇರಿದ್ದೆಂದು ತಿಳಿದು ಬಂದಿದೆ ಎಂದು ಅರ್ಜಿದಾರರಿಗೆ ಅರಣ್ಯ ಪ್ರದೇಶದ 525 ಎಕರೆ ನೀಡಿ ತಪ್ಪಾಗಿರುವುದನ್ನು ಒಪ್ಪಿಕೊಂಡರು.