ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ರೇಣುಕಾ ಪ್ರಸಾದ್ (ಮೃತರ ಸಹೋದರ), ಮನೋಜ್ ರೈ, ಎಚ್.ಆರ್.ನಾಗೇಶ್, ವಾಮನ ಪೂಜಾರಿ ಮತ್ತು ಶಂಕರ್ ಎಂಬ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ.
ರೇಣುಕಾ ಪ್ರಸಾದ್ ಸೇರಿ ಏಳು ಮಂದಿ ಆರೋಪಿಗಳನ್ನು ಪುತ್ತೂರಿನ 5ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿ ಆದೇಶ ಹೊರಡಿಸಿತ್ತು. ಈ ಆದೇಶ ರದ್ದು ಕೋರಿ ರಾಜ್ಯ ಸರ್ಕಾರ (ಪುತ್ತೂರು ಉಪ ವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ) ಕ್ರಿಮಿನಲ್ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ನೇತೃತ್ವದ ಪೀಠ ಈ ಆದೇಶ ನೀಡಿದೆ.
ಅಲ್ಲದೆ, ಪ್ರಕರಣದ ಐದನೇ ಆರೋಪಿಯಾದ ಶರಣ್ ಪೂಜಾರಿ ತಲೆಮರೆಸಿಕೊಂಡಿದ್ದು, ವಿಚಾರಣಾ ನ್ಯಾಯಾಲಯ, ಆತನ ಬಂಧನಕ್ಕೆ ಜಾಮೀನುರಹಿತ ವಾರೆಂಟ್ (ಎನ್ಬಿಡಬ್ಲ್ಯೂ) ಜಾರಿ ಮಾಡಬೇಕು. ಆತನನ್ನು ಕೋರ್ಟ್ ಮುಂದೆ ಹಾಜರುಪಡಿಸಿದ ನಂತರ ಶಿಕ್ಷೆ ವಿಧಿಸುವ ಬಗ್ಗೆ ಆತನ ಅಭಿಪ್ರಾಯ ಕೇಳಿ ಆದೇಶ ಮಾಡಲಾಗುವುದು ನ್ಯಾಯಪೀಠ ತಿಳಿಸಿದೆ. ಮೃತ ರಾಮಕೃಷ್ಣರ ಪತ್ನಿಗೆ ರೇಣುಕಾ ಪ್ರಸಾದ್ ಅವರು 10 ಲಕ್ಷ ರೂ. ಪರಿಹಾರ ಪಾವತಿಸಬೇಕು. ರೇಣುಕಾ ಪ್ರಸಾದ್ ಹಲವು ಆರೋಗ್ಯ ಸಮಸ್ಯೆ ಎದುರಿಸುತ್ತಿರುವುದರಿಂದ ಜೈಲು ಅಧೀಕ್ಷರು ಆವರಿಗೆ ಚಿಕಿತ್ಸೆ ಕಲ್ಪಿಸಬೇಕು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ಕುರುಂಜಿ ವೆಂಕಟರಮಣ ಗೌಡ ಅವರು ಕೆವಿಜಿ ಅಕಾಡೆಮಿ ಆಫ್ ಲಿಬೆರಲ್ ಎಜುಕೇಷನ್ ಸ್ಪ್ಲಿಂಟರ್ ಇನ್‌ಸ್ಟಿಟ್ಯೂಷನ್ಸ್ ಸಂಸ್ಥಾಪಕರಾಗಿದ್ದಾರೆ. ವಯಸ್ಸಾದ ಮತ್ತು ಅನಾರೋಗ್ಯ ಕಾಡಿದ ಕಾರಣ ಶೈಕ್ಷಣಿಕ ಸಂಸ್ಥೆಗಳ ನಿರ್ವಹಣೆ ಹೊಣೆಯನ್ನು ಹಿರಿಯ ಪುತ್ರ ಕೆ.ವಿ.ಚಿದಾನಂದ ಮತ್ತು ಕಿರಿಯ ಪುತ್ರ ರೇಣುಕಾ ಪ್ರಸಾದ್ ಅವರಿಗೆ ವಿಭಜನೆ ಮಾಡಿ ಹಂಚಲಾಗಿತ್ತು. ಇದರೊಂದಿಗೆ ಮತ್ತೋರ್ವ ಪುತ್ರ ಎ.ಎಸ್.ರಾಮಕೃಷ್ಣ ಅವರು ಕೆವಿಜಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಸ್ತಿ ಶೈಕ್ಷಣಿಕ ಸಂಸ್ಥೆಗಳ ಹೊಣೆಗಾರಿಕೆ ವಿಭಜನೆಯನ್ನು ರಾಮಕೃಷ್ಣ ಅವರ ಸಲಹೆ ಮೇರೆಗೆ ಮಾಡಲಾಗಿದೆ.
2009ರಲ್ಲಿ ಚಿದಾನಂದ ಪರವಾಗಿ ಕೆವಿಜಿ ಮೆಡಿಕಲ್ ಕಾಲೇಜು ವ್ಯವಹಾರಗಳನ್ನು ರಾಮಕೃಷ್ಣ ನೋಡಿಕೊಳ್ಳುತ್ತಿದ್ದರು ಎಂದು ಭಾವಿಸಿದ್ದ ರೇಣುಕಾ ಪ್ರಸಾದ್, ರಾಮಕೃಷ್ಣ ಕೊಲೆಗೆ ಸುಪಾರಿ ನೀಡಿದ್ದರು. 2011ರ ಏ. 28ರಂದು ಬೆಳಗ್ಗೆ 7.45 ರ ವೇಳೆಯಲ್ಲಿ ಅಂಬೆಥಡ್ಕ ಬಳಿಯ ಶ್ರೀಕೃಷ್ಣ ಆಯುರ್ವೇದಿಕ್ ಥೆರಪಿ ಕ್ಲಿನಿಕ್ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ರಾಮಕೃಷ್ಣ ಅವರ ಮೇಲೆ ಆರೋಪಿಗಳು ದಾಳಿ ನಡೆಸಿ, ಕೊಚ್ಚಿ ಕೊಲೆ ಮಾಡಿದ್ದರು. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಮೃತನ ಸಹೋದರ ರೇಣುಕಾ ಪ್ರಸಾದ್ ಸೇರಿದಂತೆ ಇತರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಎಲ್ಲರನ್ನೂ ಖುಲಾಸೆಗೊಳಿಸಿ 2016 ರ ಅ. 21ರಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ 2017ರಲ್ಲಿ ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯ ಸಂಬಂಧ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಪೀಠ, ಆರೋಪಿಗಳನ್ನು ದೋಷಿಗಳು ಎಂದು ಘೋಷಿಸಿತ್ತು.
ಇದನ್ನೂ ಓದಿ : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್