ಬೆಂಗಳೂರು: ದೆಹಲಿ ಮಾದರಿಯಲ್ಲೇ ರಾಜ್ಯದಲ್ಲೂ ವಕೀಲರಿಗೆ ಜೀವವಿಮೆ ಹಾಗೂ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ಸೂಕ್ತ ಯೋಜನೆ ರೂಪಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಕೊರೊನಾ ಸೋಂಕಿನ ಸಮಯದಲ್ಲೂ ಜೀವವನ್ನು ಲೆಕ್ಕಿಸದೆ ಕೆಲಸ ಮಾಡುತ್ತಿರುವ ವಕೀಲರಿಗೆ ವಿಮೆ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ 2020ರ ಮಾರ್ಚ್‌ನಲ್ಲಿ ಬರದಿದ್ದ ಪತ್ರ ಆಧರಿಸಿ ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.
ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ, ದೆಹಲಿ ಮಾದರಿಯಲ್ಲೇ ರಾಜ್ಯದಲ್ಲೂ ವಕೀಲರಿಗೆ ಜೀವವಿಮೆ ಮತ್ತು ಆರೋಗ್ಯ ವಿಮೆ ಕಲ್ಪಿಸಬೇಕಿದೆ. ಈ ಸಂಬಂಧ ಸರ್ಕಾರ ಬೆಂಗಳೂರು ವಕೀಲರ ಸಂಘ, ಕರ್ನಾಟಕ ವಕೀಲರ ಪರಿಷತ್ ಪದಾಧಿಕಾರಿಗಳು ಮತ್ತು ವಿಮಾ ಕಂಪನಿಗಳೊಂದಿಗೆ ಸಭೆ ನಡೆಸಿ ಚರ್ಚಿಸಬೇಕು. ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯ ಆಧರಿಸಿ ವಕೀಲರಿಗೆ ಜೀವ ವಿಮೆ ಹಾಗೂ ಆರೋಗ್ಯ ವಿಮೆ ಯೋಜನೆ ರೂಪಿಸಿ, ಆ ಕುರಿತ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿತು.
ಅಲ್ಲದೆ, ವಕೀಲರಿಗೆ ವಿಮಾ ಸೌಲಭ್ಯ ಒದಗಿಸುವ ವಿಚಾರವಾಗಿ ರಚಿಸಿರುವ ಸಮಿತಿ ಈವರೆಗೆ ಯಾವೆಲ್ಲ ಕ್ರಮ ಕೈಗೊಂಡಿದೆ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದ ಪೀಠ ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿತು.
ಕೊರೊನಾ ಹಿನ್ನೆಲೆ ವಕೀಲರಿಗೆ ಜೀವವಿಮೆ ಹಾಗೂ ಆರೋಗ್ಯ ವಿಮೆ ಕಲ್ಪಿಸುವ ವಿಚಾರವಾಗಿ ದೆಹಲಿ ಹೈಕೋರ್ಟ್‌ಗೆ ಅರ್ಜಿಯೊಂದು ದಾಖಲಾಗಿತ್ತು. ಅದರ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ವಕೀಲರಿಗೆ ಸೂಕ್ತ ವಿಮಾ ಸೌಲಭ್ಯ ಕಲ್ಪಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು. ಅದರಂತೆ ಭಾರತೀಯ ಜೀವವಿಮಾ ಕಂಪನಿ ಹಾಗೂ ಇತರೆ ವಿಮಾ ಕಂಪನಿಗಳು ಪರಸ್ಪರ ಚರ್ಚಿಸಿ ವಕೀಲರಿಗೆ ಜೀವವಿಮೆ ಮತ್ತು ಆರೋಗ್ಯ ವಿಮೆ ಯೋಜನೆ ರೂಪಿಸಿತ್ತು. ಅದನ್ನು ಸರ್ಕಾರ ಬಜೆಟ್‌ನಲ್ಲಿ ಅನುಮೋದಿಸಿತ್ತು.