ಬೆಂಗಳೂರು: ರಾಜ್ಯದಲ್ಲಿ ಸಾಹಿತಿ ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರ ಬಂದಿರುವ ಸಂಬಂಧ ದಾಖಲಾದ ಪ್ರಕರಣಗಳನ್ನು ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಬೆದರಿಕೆ ಪತ್ರಗಳು ಬರುತ್ತಿರುವ ಸಂಬಂಧ ಕಳವಳ ವ್ಯಕ್ತಪಡಿಸಿ ಹಿರಿಯ ಸಾಹಿತಿ ಡಾ.ಕೆ.ಮರುಳಸಿದ್ಧಪ್ಪ ನೇತೃತ್ವದ ನಿಯೋಗವು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು.
ಸಾಹಿತಿ, ಲೇಖಕರಿಗೆ ಹಾಗೂ ಹೋರಾಟಗಾರರಿಗೆ ಅನಾಮಧೇಯ ಪತ್ರ ಕಳುಹಿಸಿ ಬೆದರಿಕೆ ಸಂದೇಶ ಬಂದಿವೆ. ಈ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಸಾಹಿತಿ ಕುಂ.ವೀರಭದ್ರಪ್ಪ, ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ಬಿ.ಎಲ್.ವೇಣು, ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಬಂಜಗೆರೆ ಜಯಪ್ರಕಾಶ್ ಎರಡು ಪ್ರಕರಣ ಹಾಗೂ ಲೇಖಕಿಯರಾದ ವಸುಂಧರ ಭೂಪತಿ ಅವರು ಬಸವೇಶ್ವರ ನಗರ ಠಾಣೆಯಲ್ಲಿ ಎರಡು ಹಾಗೂ ಬಿ.ಟಿ.ಲಲಿತಾ ನಾಯಕ್ ಅವರು ಸಂಜಯನಗರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಸೇರಿ ಒಟ್ಟು 7 ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಎಲ್ಲ ಪ್ರಕರಣಗಳನ್ನು ಪ್ರತಿಯೊಂದು ಆಯಾಮಗಳಿಂದಲೂ ಆಳವಾದ ತನಿಖೆ ನಡೆಸುವ ಅಗತ್ಯವಿದೆ. ಹೀಗಾಗಿ ನಮೂದಿಸಿರುವ ಎಲ್ಲ ಪ್ರಕರಣಗಳ ತನಿಖೆಯನ್ನು ಬೆಂಗಳೂರು ನಗರ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ.
ಪ್ರಕರಣ ತನಿಖೆಗಾಗಿ ವಿಶೇಷ ತಂಡ ರಚಿಸಿ ಎಸಿಪಿ ಮಟ್ಟದ ಅಧಿಕಾರಿಯನ್ನು ತನಿಖಾಧಿಕಾರಿಯಾಗಿ ನೇಮಿಸಬೇಕು. ಇದರ ಮೇಲ್ವಿಚಾರಣೆಯನ್ನು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ನೋಡಿಕೊಳ್ಳಬೇಕು. ನಗರ ಪೊಲೀಸ್ ಆಯುಕ್ತರು ಕಾಲಕಾಲಕ್ಕೆ ಪರಿಶೀಲಿಸಬೇಕು. ಆಯಾ ಜಿಲ್ಲಾಮಟ್ಟದ ಎಸ್ಪಿಗಳು ಪ್ರಕರಣಗಳನ್ನು ಹಸ್ತಾಂತರಿಸಿ ತನಿಖೆಗೆ ಬೇಕಾಗುವ ಮಾಹಿತಿ ನೀಡಿ ಸಹಕರಿಸಬೇಕು ಎಂದು ಡಿಜಿ ಅಲೋಕ್ ಮೋಹನ್ ಆದೇಶಿಸಿದ್ದಾರೆ.
ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಹಿರಿಯ ಸಾಹಿತಿ ಡಾ.ಕೆ. ಮರುಳಸಿದ್ದಪ್ಪ, "ಹಲವು ಸಾಹಿತಿಗಳಿಗೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಇದರಿಂದಾಗಿ ಸಾಹಿತಿಗಳು ಆತಂಕ, ಮುಜುಗರದಿಂದ ಬದುಕುವ ಪರಿಸ್ಥಿತಿ ಉಂಟಾಗಿದೆ. ಕುಂ.ವೀರಭದ್ರಪ್ಪ, ಡಾ.ವಸುಂಧರಾ ಭೂಪತಿ, ಬಂಜಗೆರೆ ಜಯಪ್ರಕಾಶ್ ಅವರಿಗೆ ಅತಿ ಹೆಚ್ಚು ಬೆದರಿಕೆಗಳು ಬಂದಿವೆ" ಎಂದು ಹೇಳಿದರು.
"ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದ, ವಾತಾವರಣ ಸೃಷ್ಟಿಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಎಂ.ಎಂ. ಕಲಬುರ್ಗಿ, ಗೌರಿ ಲಂಕೇಶ್ ಅವರಿಗೆ ಆಗ ಗತಿಯೇ ನಮಗೂ ಉಂಟಾಗಬಹುದೆಂದು ಆತಂಕ ವ್ಯಕ್ತಪಡಿಸಿದರು. ಬೆದರಿಕೆ ಪತ್ರಗಳ ತನಿಖೆ ಬಗ್ಗೆ ಒಂದು ತಂಡ ರಚಿಸಿದ್ದು, ಇನ್ನೊಂದು ದಕ್ಷ ಪೊಲೀಸ್ ಅಧಿಕಾರಗಳ ತಂಡವನ್ನು ರಚಿಸಬೇಕು" ಎಂದು ತಿಳಿಸಿದರು. ಸಿಎಂ ಸಿದ್ದರಾಮಯ್ಯ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ : ಸಾಹಿತಿಗಳಿಗೆ ಜೀವ ಬೆದರಿಕೆ ಹಿನ್ನೆಲೆ: ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ