ಬೆಂಗಳೂರು: ಸಾವಿರಾರು ಜನ ಓಡಾಡುವ ರಸ್ತೆಯಲ್ಲೇ ಬೆಳ್ಳಂ ಬೆಳಗ್ಗೆ ರಾಜಾರೋಷವಾಗಿ ದರೋಡೆ ಮಾಡಿರುವ ಘಟನೆ, ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಚಿಕ್ಕಪೇಟೆಯ ಮೆಟ್ರೊ ನಿಲ್ದಾಣದ ಬಳಿ ನಿಂತು ಮುಖಕ್ಕೆ ಮಾಸ್ಕ್ ಹಾಕಿಕೊಂಡು ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಚಾಕು ತೋರಿಸಿ ಬೆದರಿಸಿದ್ದಾರೆ. ಬಳಿಕ ಮೊಬೈಲ್ ಹಾಗೂ ಹಣ ಕೊಡುವಂತೆ ಧಮಕಿ ಹಾಕಿ ಕಸಿದುಕೊಂಡು ಪರಾರಿಯಾಗಿದ್ದಾರೆ. ಆರೋಪಿಗಳ ಈ ಕೃತ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಲಾಕ್ಡೌನ್ ಸಂದರ್ಭದಲ್ಲಿ ನಡೆದಿರುವ ಘಟನೆ ಇದಾಗಿದೆ. ಹಳೆಯ ಘಟನೆ ಎಂಬ ಪ್ರಾಥಮಿಕ ಮಾಹಿತಿ ದೊರೆತಿದೆ. ವಿಡಿಯೋದಲ್ಲಿರುವವರ ಬಗ್ಗೆ ಮಾಹಿತಿ ಕಲೆಹಾಕಲು ಸೂಚಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಎಂ. ಪಾಟೀಲ್ ತಿಳಿಸಿದ್ದಾರೆ.