ಬೆಂಗಳೂರು: ನಗರದಲ್ಲಿ ಲಾಕ್ಡೌನ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿದಿನವೂ ಅವಲೋಕನ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಕುರಿತಾಗಿ ಅಧಿಕಾರಿಗಳಿಂದ ಸಿಎಂ ಪ್ರತಿದಿನ ವರದಿ ತರಿಸಿಕೊಳ್ಳುತ್ತಿದ್ದಾರೆ. ತಜ್ಞರ ಮಾಹಿತಿ ಪಡೆದು ಸಿಎಂ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
ಲಾಕ್ಡೌನ್ ಬಗ್ಗೆ ವ್ಯಾಪಕವಾದ ಚರ್ಚೆಯಾಗುತ್ತಿದೆ. ಸಿಎಂ ಕೂಡ ಎಲ್ಲಾ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತಿದ್ದಾರೆ. ಲಾಕ್ಡೌನ್ ತೆಗೆದ ಮೇಲೆ ಏನೆಲ್ಲಾ ನಡೆಯುತ್ತಿದೆ ಎಂಬುದನ್ನು ಸಹ ಗಮನಿಸುತ್ತಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತ ಚರ್ಚೆ ಮಾಡಬೇಕಾ, ಅಧಿಕಾರಿಗಳ ಜೊತೆ ಚರ್ಚಿಸಬೇಕಾ ಅಥವಾ ಟಾಸ್ಕ್ ಫೋರ್ಸ್ ಕಮಿಟಿಯಲ್ಲಿ ಚರ್ಚೆ ಮಾಡಬೇಕಾ ಎಂಬುದರ ಬಗ್ಗೆಯೂ ಸಿಎಂ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಐಎಎಸ್ ಅಧಿಕಾರಿ ವಿಜಯಶಂಕರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವರು, ಐಎಂಎ ಪ್ರಕರಣ ಅದೆಲ್ಲ ಹಳೆಯದು. ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ನಂತರ ಸತ್ಯಾಂಶ ಗೊತ್ತಾಗಲಿದೆ ಎಂದು ಇದೇ ವೇಳೆ ಹೇಳಿದರು.