ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿನ ರಸ್ತೆ ಗುಂಡಿಗಳಿಂದ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡವರು ಮತ್ತು ಸಾವನ್ನಪ್ಪುವ ಪ್ರಕರಣಗಳಲ್ಲಿ ದೂರು ದಾಖಲಿಸಲು ಬರುವ ಸಾರ್ವಜನಿಕರಿಗೆ ತಾಂತ್ರಿಕ ಕಾರಣಗಳನ್ನು ನೀಡದೇ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಗೃಹ ಇಲಾಖೆಗೆ ಹೈಕೋರ್ಟ್ ಸೂಚಿಸಿದೆ.
ಬೆಂಗಳೂರು ನಗರದ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವುದಕ್ಕೆ ಸಂಬಂಧಿಸಿದಂತೆ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠ, ಅರ್ಜಿಗೆ ಸಂಬಂಧಿಸಿದಂತೆ ಗೃಹ ಇಲಾಖೆಯನ್ನು ಪ್ರತಿವಾದಿಯನ್ನಾಗಿಸಲು ಅರ್ಜಿದಾರರಿಗೆ ಸೂಚನೆ ನೀಡಿದೆ.
ಜತೆಗೆ, ರಸ್ತೆ ಗುಂಡಿಯಿಂದ ಅಪಘಾತಕ್ಕೊಳಗಾಗುವವರು ಪೊಲೀಸ್ ಠಾಣೆಗೆ ದೂರು ಸಲ್ಲಿಸಬಹುದು. ದೂರು ಸಲ್ಲಿಸಲು ಮುಂದೆ ಬರುವವರನ್ನು ಪೊಲೀಸ್ ಅಧಿಕಾರಿಗಳು ಯಾವುದೇ ತಾಂತ್ರಿಕ ಕಾರಣಗಳನ್ನು ನೀಡಿ ವಾಪಸ್ ಆಗುವಂತೆ ಮಾಡಬಾರದು. ಘಟನೆ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಬೇಕು ಎಂದು ನ್ಯಾಯಪೀಠ ಸೂಚನೆ ನೀಡಿದೆ.
ಜತೆಗೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು(ಎನ್‌ಹೆಚ್‌ಎಐ) ಮುಂದಿನ ಎಂಟು ವಾರಗಳಲ್ಲಿ ರಸ್ತೆಗುಂಡಿಗಳ ಗುಣಮಟ್ಟ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು. ಈ ಸಂಬಂಧದ ಎಲ್ಲ ದಾಖಲೆಗಳ ಪ್ರತಿಗಳನ್ನು ಬಿಬಿಎಂಪಿ ವಕೀಲರು ಎನ್‌ಹೆಚ್‌ಎಐನ ಪರಿಶೀಲನಾ ಸಮಿತಿ ಲಭ್ಯವಾಗುವಂತೆ ಮಾಡಬೇಕು. ಪರಿಶೀಲನೆ ನಡೆಸಿದ ವರದಿಯನ್ನು ಎನ್‌ಹೆಚ್‌ಎಐ ಅಧಿಕಾರಿಗಳು 2023ರ ಫೆಬ್ರವರಿ 3ರಂದು ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಫೆಬ್ರವರಿ 6ಕ್ಕೆ ಮುಂದೂಡಿತು.
ಅರ್ಜಿ ಹಿಂಪಡೆದ ಅಮೆರಿಕ ಕಂಪನಿ: ಇದೇ ವೇಳೆ, ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗುತ್ತಿಗೆಯನ್ನು ಏಕಾಏಕಿ ವಜಾ ಮಾಡಿರುವುದನ್ನು ಪ್ರಶ್ನಿಸಿ ಅಮೆರಿಕನ್ ರೋಡ್ ಟ್ರಾನ್ಸ್ಪೋರ್ಟ್ ಸರ್ವೀಸ್ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಿತು. ವಿಚಾರಣೆ ವೇಳೆ ಅಮೆರಿಕನ್ ರೋಡ್ ಟ್ರಾನ್ಸ್ಪೋರ್ಟ್ ಸರ್ವೀಸ್ ಪರ ವಕೀಲರು ಅರ್ಜಿ ಹಿಂಪಡೆಯಲು ಮನವಿ ಮಾಡಿದರು. ಇದಕ್ಕೆ ನ್ಯಾಯಪೀಠ ಅನುಮತಿ ನೀಡಿತು.