ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗು ಜೆಡಿಎಸ್ ಮೈತ್ರಿ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಹಾಗು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸ್ವಾಗತಿಸಿದ್ದಾರೆ. ಮೈತ್ರಿ ಮೂಲಕ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.
ಫ್ರೀಡಂ ಪಾರ್ಕ್ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಈ ಕುರಿತು ಮಾತುಕತೆ ನಡೆದಿದೆ. ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಮತ್ತು ನಮ್ಮ ವರಿಷ್ಠರಾದ ಪ್ರಧಾನಿ ನರೇಂದ್ರ ಮೋದಿ ಹಾಗು ಕೇಂದ್ರ ಗೃಹ ಸಚಿವ ಅಮಿತ್ ಶಾರೊಂದಿಗೆ ಮೈತ್ರಿ ಮಾತುಕತೆ ನಡೆಸಿದ್ದಾರೆ. ಉಭಯ ಪಕ್ಷಗಳ ನಾಯಕರು ಕೂಡಾ ಒಪ್ಪಿಕೊಂಡಿದ್ದಾರೆ. ಜೆಡಿಎಸ್ಗೆ ನಾಲ್ಕು ಸ್ಥಾನ ಬಿಟ್ಟುಕೊಡಲು ಅಮಿತ್ ಶಾ ಒಪ್ಪಿಕೊಂಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಜೆಡಿಎಸ್ಗೆ 4 ಸ್ಥಾನ ಬಿಟ್ಟುಕೊಟ್ಟು ಇನ್ನುಳಿದ 24 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ ಎಂದರು.
ಮೈತ್ರಿಯನ್ನು ನಾನು ಸ್ವಾಗತಿಸುತ್ತೇನೆ. ಈ ಮೂಲಕ ನಾವು ಹೆಚ್ಚು ಸ್ಥಾನ ಗೆಲ್ಲಲು ಸಹಕಾರಿಯಾಗಲಿದೆ. ಮೈತ್ರಿಕೂಟಕ್ಕೆ 25-26 ಸ್ಥಾನಗಳಲ್ಲಿ ಗೆಲುವು ಸಿಗಲಿದೆ ಎನ್ನುವ ವಿಶ್ವಾಸವಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಬಸವರಾಜ ಬೊಮ್ಮಾಯಿ ಹೇಳಿದ್ದೇನು?: ಮೈತ್ರಿಯನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸ್ವಾಗತಿಸಿದ್ದಾರೆ. ಕರ್ನಾಟಕ ಉಳಿಸಿಲು ಮೈತ್ರಿ ಮಾಡಿಕೊಳ್ಳಲಾಗಿದೆ. ವಿಪಕ್ಷಗಳು ಸಹಜವಾಗಿಯೇ ಒಂದಾಗಿದ್ದೇವೆ. ರಾಜ್ಯ ಉಳಿಸಲು ಒಂದಾಗುವ ಅವಶ್ಯಕತೆಯೂ ಇದೆ ಎಂದು ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ: ಇನ್ಮುಂದೆ ಮನೆಯಲ್ಲಿ ಕೂರಲ್ಲ, ಮತ್ತೆ ರಾಜ್ಯದ ಉದ್ದಗಲ ಪ್ರವಾಸ, ಹೋರಾಟ ಆರಂಭಿಸುತ್ತೇನೆ: ಯಡಿಯೂರಪ್ಪ ಘೋಷಣೆ
ಮತ್ತೆ ಹೋರಾಟ ಆರಂಭಿಸುತ್ತೇನೆ: ನಾನು ಮನೆಯಲ್ಲಿ ಕೂರುವ ಪ್ರಶ್ನೆಯೇ ಇಲ್ಲ. ರಾಜ್ಯದ ಉದ್ದಗಲಕ್ಕೆ ಮತ್ತೆ ಓಡಾಟ ಮಾಡುತ್ತೇನೆ. ಹೋರಾಟ ಮಾಡುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 22-23 ಸ್ಥಾನಗಳನ್ನು ಗೆಲ್ಲಲೇಬೇಕು. ಆ ನಿಟ್ಟಿನಲ್ಲಿ ಏನೇನು ಪ್ರಯತ್ನ ಬೇಕೋ ಅದನ್ನು ಮಾಡುತ್ತೇನೆ. ನನ್ನ ಪ್ರವಾಸ ಮೂರ್ನಾಲ್ಕು ದಿನದಲ್ಲಿ ಆರಂಭವಾಗಲಿದೆ. ಮತ್ತೆ ರಾಜ್ಯ ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪಕ್ಷವನ್ನು ಸದೃಢಗೊಳಿಸುತ್ತೇನೆ ಎಂಬ ನಿರ್ಧಾರವನ್ನು ಯಡಿಯೂರಪ್ಪ ಇತ್ತೀಚೆಗೆ ಪ್ರಕಟಿಸಿದ್ದರು.
ಸರ್ಕಾರದ ಆಡಳಿತವೈಖರಿ ವಿಫಲವಾಗಿದ್ದು, ಕಾಂಗ್ರೆಸ್ ನಾಯಕರು ಜನವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಬರಗಾಲ ತಾಂಡವವಾಡುತ್ತಿದೆ. ವಿದ್ಯುತ್ ಕಣ್ಣಾಮುಚ್ಚಾಲೆ ಆಡುತ್ತಿದೆ. ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಇದನ್ನು ಖಂಡಿಸಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಶುಕ್ರವಾರದಿಂದ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಯುಡಿಯೂರಪ್ಪ ತಿಳಿಸಿದ್ದರು.
ಇದನ್ನೂ ಓದಿ: ಎಂಪಿ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ: ಸೆ.10 ರಂದು ನಡೆಯಲಿರುವ ಸಮಾವೇಶದಲ್ಲಿ ನಿರ್ಧಾರ.. ಮಾಜಿ ಸಚಿವ ಹೆಚ್ ಡಿ ರೇವಣ್ಣ