ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ರಾಜ್ಯ ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದು, ಇದರ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯನ್ನು ಭಾನುವಾರ ಕರೆಯಲಾಗಿದೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೇರಿದಂತೆ ಹಲವು ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದು, ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಯಶಸ್ಸಿಗೆ ದುಡಿದ ಪ್ರಚಾರ ಸಮಿತಿಯ ರಾಜ್ಯ, ಜಿಲ್ಲಾ ಹಾಗೂ ವಿಧಾನಸಭಾ ಕ್ಷೇತ್ರವಾರು ಸಮಿತಿಗಳ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವುದು ಸಭೆಯ ಉದ್ದೇಶವಾಗಿದೆ. ಈ ಮೂಲಕ ಪದಾಧಿಕಾರಿಗಳನ್ನು ಹತ್ತಿರದಲ್ಲೇ ಇರುವ ಲೋಕಸಭೆಯ ಸಾರ್ವತ್ರಿಕ ಚುನಾವಣೆಗೆ ಹುರಿದುಂಬಿಸುವುದು ಪಕ್ಷದ ಚಿಂತನೆಯಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಓಟಕ್ಕೆ ತಡೆ ಹಾಕಿರುವ ರಾಜ್ಯ ಕಾಂಗ್ರೆಸ್ನ ಉತ್ಸಾಹ ಇಮ್ಮಡಿಯಾಗಿದ್ದು, ರಾಷ್ಟ್ರ ಮಟ್ಟದಲ್ಲೂ ಇದೇ ರೀತಿಯ ಫಲಿತಾಂಶ ಬರುವಂತೆ ನೋಡಿಕೊಳ್ಳಲು ಬಯಸುತ್ತಿದೆ. ಇದಕ್ಕೆ ವೇದಿಕೆಯಾಗಿ, ಭಾನುವಾರದ ಮಹತ್ವದ ಸಭೆಯನ್ನು ಕರೆಯಲಾಗಿದೆ. ಬೆಳಗ್ಗೆ 11ಗಂಟೆಗೆ ಆರಂಭವಾಗುವ ಸಭೆ ಮಧ್ಯಾಹ್ನದವರೆಗೆ ನಡೆಯಲಿದೆ ಎಂದು ಪ್ರಚಾರ ಸಮಿತಿಯ ಸಮನ್ವಯಕಾರ ಎ ಪಿ ಬಸವರಾಜ ತಿಳಿಸಿದ್ದಾರೆ.
ಇದನ್ನೂ ಓದಿ : 2024ರ ಚುನಾವಣೆಗೆ ಸಮರೋಪಾದಿಯಲ್ಲಿ ಸಿದ್ಧತೆ .. INDIA ಕೂಟದಿಂದ ಇಂದು ಮಹತ್ವದ ಘೋಷಣೆಗಳ ಸಾಧ್ಯತೆ