ಬೆಂಗಳೂರು: ಎರಡನೇ ಹಂತದಲ್ಲಿ ನಡೆಯಲಿರುವ ರಾಜ್ಯದ 14 ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಮೂರನೇ ದಿನಕ್ಕೆ 11 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.
ಬಿಜೆಪಿಯಿಂದ ಇಬ್ಬರು,ಕಾಂಗ್ರೆಸ್ ನಿಂದ ಓರ್ವ, ಉತ್ತಮ ಪ್ರಜಾಕೀಯ ಪಕ್ಷದಿಂದ ಮೂವರು ಅಭ್ಯರ್ಥಿಗಳು ಸೇರಿ ಒಟ್ಟು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬೆಳಗಾವಿ, ಬೀದರ್, ದಾವಣಗೆರೆ, ಶಿವಮೊಗ್ಗದಲ್ಲಿ ತಲಾ ಇಬ್ಬರು, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಕ್ಷೇತ್ರದಲ್ಲಿ ತಲಾ ಒಬ್ಬೊಬ್ಬ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಕೇಂದ್ರ ಸಚಿವ ರಮೇಶ್ ಜಿಗಜಿಣಗಿ, ಭಗವಂತ ಖೂಬಾ, ಡಾ.ವಿರುಪಾಕ್ಷಪ್ಪ ಸಾದುನವರ್ ನಾಮಪತ್ರ ಸಲ್ಲಿಕೆ ಮಾಡಿದವರಲ್ಲಿ ಪ್ರಮುಖರಾಗಿದ್ದಾರೆ. ಕಳೆದೆರಡು ದಿನದ ನಾಮಪತ್ರ ಸೇರಿ ಒಟ್ಟು ಈವರೆಗೆ 41 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದಂತಾಗಿದೆ.