ಬೆಂಗಳೂರು: ಇತ್ತೀಚೆಗಷ್ಟೇ ಉಂಟಾದ ವಾಯುಭಾರ ಕುಸಿತದ ಪರಿಣಾಮ, ಭಾರೀ ಮಳೆಯಾಗಿ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದೀಗ ಮಹಾರಾಷ್ಟ್ರದ ಕರಾವಳಿ ಭಾಗದಲ್ಲಿ ಮಳೆಯಾಗುತ್ತಿದೆ. ಇದೀಗ ಮತ್ತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೊಸದಾಗಿ ಮತ್ತೆ ಅಕ್ಟೋಬರ್ 19ರಂದು ಬಂಗಾಳ ಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತವಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಉತ್ತರ ಒಳನಾಡಿನಲ್ಲಿ ಅ.16 ರಿಂದ 19ರವರೆಗೆ ಸಾಧಾರಣ ಮಳೆಯಾಗಲಿದ್ದು, ಮತ್ತೆ ಹೊಸದಾಗಿ ವಾಯುಭಾರ ಕುಸಿತ ಉಂಟಾಗುವ ಪರಿಣಾಮ ಅ.20 ರಂದು ಮಳೆ ಪ್ರಮಾಣ ಮತ್ತೆ ಏರಿಕೆಯಾಗಲಿದೆ.
ಬೆಳಗಾವಿ, ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಜಿಲ್ಲೆಗಳಲ್ಲಿ ಅ.20ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಕರಾವಳಿ ಜಿಲ್ಲೆಗಳಲ್ಲಿ ಮಾನ್ಸೂನ್ ಚುರುಕಾಗಿದ್ದು, ವ್ಯಾಪಕ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ 8.4 ಸೆಂ.ಮೀ, ಪಣಂಬೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ ಎಂದು ಸಿ.ಎಸ್.ಪಾಟೀಲ್ ತಿಳಿಸಿದರು.
ದಕ್ಷಿಣ ಒಳನಾಡಿನಲ್ಲಿ ಅ.16 ರಿಂದ 19ರವರೆಗೆ ಸಾಧಾರಣ ಮಳೆ ಹಾಗೂ ಅ.20 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಅ.20ರವರೆಗೆ ಸಾಧಾರಣ ಮಳೆ ಆಗಲಿದೆ. ಚಿತ್ರದುರ್ಗ, ದಾವಣಗೆರೆ, ಬಳ್ಳಾರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಅ.16 ರಿಂದ 19ರ ವರೆಗೆ ಕೆಲವು ಕಡೆ ಮಾತ್ರ ಮಳೆಯಾಗಲಿದ್ದು, ಅ.19-20ರವರೆಗೆ ಕೆಲವು ಕಡೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.