ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಬಂಧನ ಪ್ರಕರಣದ ತನಿಖಾಧಿಕಾರಿಗಳನ್ನು ಬದಲಿಸಲಾಗಿದೆ. ಪ್ರಕರಣ ದಾಖಲಾದಾಗಿನಿಂದ ತನಿಖೆ ಕೈಗೊಂಡಿದ್ದ ಡಿವೈಎಸ್ಪಿ ಪ್ರಮೋದ್ ಕುಮಾರ್ ಹಾಗೂ ಇನ್ಸ್ಪೆಕ್ಟರ್ ಕುಮಾರಸ್ವಾಮಿ ಅವರ ಸ್ಥಾನಕ್ಕೆ ಡಿವೈಎಸ್ಪಿ ಆಂಥೋನಿ ಜಾನ್ ಹಾಗೂ ಇನ್ಸ್ಪೆಕ್ಟರ್ ಬಾಲಾಜಿ ಬಾಬು ನೇಮಕಗೊಂಡಿದ್ದಾರೆ.
40 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳಿಂದ ಶಾಸಕರ ಪುತ್ರ ಪ್ರಶಾಂತ್ ಮಾಡಾಳ್ ಬಂಧನವಾಗಿತ್ತು. ಮುಂದುವರೆದ ಪರಿಶೀಲನೆಯಲ್ಲಿ ಪ್ರಶಾಂತ್ ಮಾಡಾಳ್ ಮನೆಯಲ್ಲಿಯೂ ನಗದು ಪತ್ತೆಯಾಗಿತ್ತು. ಲೋಕಾಯುಕ್ತರು ತನಿಖೆ ಚುರುಕುಗೊಳಿಸುತ್ತಿದ್ದಂತೆ ಇದೀಗ ಇಬ್ಬರು ತನಿಖಾಧಿಕಾರಿಗಳು ಬದಲಾಗಿದ್ದಾರೆ.
ಪ್ರಕರಣದ ಹಿನ್ನೆಲೆ: ಚನ್ನಗಿರಿ ಕ್ಷೇತ್ರ ಶಾಸಕರೂ ಆಗಿರುವ ಮಾಡಾಳ್ ವಿರೂಪಾಕ್ಷಪ್ಪ ಕೆಎಸ್‌ಡಿಎಲ್‌ನ ಅಧ್ಯಕ್ಷರಾಗಿದ್ದರು. ಇದಕ್ಕೆ ಕಚ್ಚಾವಸ್ತುಗಳ ಪೂರೈಕೆಗಾಗಿ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಎದುರಿಸುತ್ತಿದ್ದಾರೆ. ಇದೇ ಪ್ರಕರಣದಲ್ಲಿ ಇವರ ಪುತ್ರ ಮಾಡಾಳ್ ಪ್ರಶಾಂತ್ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಲಂಚದ ಹಣ ಮತ್ತು ಆರೋಪಿಯನ್ನು ಬಂಧಿಸಿದ್ದರು.
ಇದನ್ನೂ ಓದಿ: ಶಾಸಕ ವಿರೂಪಾಕ್ಷಪ್ಪ ಮಾಡಾಳ್ಗೆ ನೋಟಿಸ್ ಜಾರಿಗೊಳಿಸಲು ಲೋಕಾಯುಕ್ತ ಸಿದ್ಧತೆ
ಇದಾದ ಬಳಿಕ ವಿರೂಪಾಕ್ಷಪ್ಪ ಮತ್ತವರ ಪುತ್ರನ ಬೆಂಗಳೂರಿನ ಕಚೇರಿಗಳು ಹಾಗೂ ಮನೆ ಮತ್ತು ಚೆನ್ನಗಿರಿಯ ಮನೆಗಳ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು ನಗದು ಜಪ್ತಿ ಮಾಡಿ ತನಿಖೆ ಮುಂದುವರೆಸಿದ್ದರು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ರವಾನಿಸಿದ್ದ ಮಾಡಾಳ್ ವಿರುಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಕೋರ್ಟ್ ನಿರ್ಬಂಧ: ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರ ಪ್ರಶಾಂತ್ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿನ್ನೆ ಆದೇಶಿಸಿದೆ. ಬೆಂಗಳೂರಿನ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಾತ್ಕಾಲಿಕ ಪ್ರತಿಬಂಧಕಾದೇಶ ಹೊರಡಿಸಿದೆ. ಸುದ್ದಿ ಮಾಧ್ಯಮಗಳಲ್ಲೂ ದಾವೆದಾರರ ವಿರುದ್ಧ ಯಾವುದೇ ರೀತಿಯ ಮಾನಹಾನಿ ಮತ್ತು ಅಭಿಪ್ರಾಯ ಪ್ರಸಾರ, ಪ್ರಚಾರ, ಅಭಿವ್ಯಕ್ತಿ ಮಾಡದಂತೆ ಪ್ರತಿವಾದಿ ಮಾಧ್ಯಮಗಳನ್ನು ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಸರ್ಕಾರವೇ ರಕ್ಷಣೆ ಮಾಡುತ್ತಿದೆ: ಸಿದ್ದರಾಮಯ್ಯ