ಬೆಂಗಳೂರು: ಕೊರೊನಾ ವೈರಸ್ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಆರೋಗ್ಯ ಅಧಿಕಾರಿಗಳ ಜೊತೆ ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ ಸಭೆ ನಡೆಸಿದರು.
ಬಿಬಿಎಂಪಿ ಹಾಗೂ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಕೂಡಲೆ ಕೊರೊನಾ ವೈರಸ್ ಬಗ್ಗೆ ಮುಂಜಾಗೃತ ಕ್ರಮಗಳನ್ನು ಕೈಗೊಂಡು, ಎಲ್ಲ ಆಸ್ಪತ್ರೆಗಳಲ್ಲಿ ಮಾಸ್ಕ್, ಗ್ಲೌಸ್, ಪಿ.ಪಿ.ಇ ಕಿಟ್ ಸೇರಿದಂತೆ ಅವಶ್ಯಕ ಸಾಮಗ್ರಿಗಳು ಹಾಗೂ ಔಷಧಗಳನ್ನು ಶೇಖರಿಸಿಟ್ಟುಕೊಳ್ಳಬೇಕು ಎಂದು ಆಯುಕ್ತರು ಎಲ್ಲ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಇನ್ನೂ ಪತ್ತೆಯಾಗಿಲ್ಲ. ವೈರಸ್ ಸೋಂಕಿತರನ್ನು ಪತ್ತೆ ಹಚ್ಚುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಪುನಃಮನನ ತರಬೇತಿಯನ್ನು ನೀಡಲಾಗಿದೆ. ಅಲ್ಲದೇ ಪಾಲಿಕೆ ಮುಖ್ಯ ಆರೋಗ್ಯಾಧಿಕಾರಿಗಳು, ಆರೋಗ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಲಿಂಕ್ ವರ್ಕ್ ತಂಡಗಳನ್ನು ನಿಯೋಜನೆ ಮಾಡಿಕೊಂಡು, ನಾಗರಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಪಾಲಿಕೆ ವ್ಯಾಪ್ತಿಯ ಎಲ್ಲ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವುದು ಹಾಗೂ ಹೆಚ್ಚು ಜನಸಂದಣಿ ಆಗುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ವೈರಸ್ ಕಂಡುಬಂದ ಪ್ರದೇಶದ ಸುತ್ತಲಿನ 3 ಕಿ.ಮೀ ವ್ಯಾಪ್ತಿಯಲ್ಲಿ ಸೋಂಕು ಇದೆಯಾ ಎಂಬುದರ ಬಗ್ಗೆ ಕಡ್ಡಾಯವಾಗಿ ತಪಾಸಣೆ ನಡೆಸಬೇಕು. ಅಲ್ಲದೇ 3 ಕಿ.ಮೀ ಜೊತೆಗೆ ಬಫರ್ ಜೋನ್ ಬರುವ 5 ಕಿ.ಮೀ ಸೇರಿದಂತೆ ಒಟ್ಟು 8 ಕಿ.ಮೀ ಪ್ರದೇಶದ ಎಲ್ಲಾ ಕಡೆ ತಪಾಸಣೆ ನಡೆಸಬೇಕು ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಸಮನ್ವತೆಯಿಂದ ನಿತ್ಯ ಮಾಹಿತಿ ಪಡೆದು, ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ಸಭೆಯಲ್ಲಿ ವಿಶೇಷ ಆಯುಕ್ತ (ಆರೋಗ್ಯ) ಡಾ.ರವಿಕುಮಾರ್ ಸುರಪುರ, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ, ಮುಖ್ಯ ಆರೋಗ್ಯಾಧಿಕಾರಿ (ಕ್ಲಿನಿಕಲ್) ಡಾ. ನಿರ್ಮಲಾ ಬುಗ್ಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಹಾಗೂ ಸರ್ಕಾರದ ವತಿಯಿಂದ ನೋಡಲ್ ಅಧಿಕಾರಿ ಡಾ.ಪ್ರಕಾಶ್ ಹಾಗೂ ಬೆಂಗಳೂರು ಗ್ರಾಮಾಂತರ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.