ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಸುಮಾರು 135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್ ಸಂಪೂರ್ಣ ಬಹುಮತವನ್ನು ಪಡೆದಿದೆ. ಆಡಳಿತಾರೂಢ ಬಿಜೆಪಿಯು ಕೇವಲ 66 ಸ್ಥಾನಗಳನ್ನು ಪಡೆಯುವ ಹೀನಾಯ ಸೋಲನ್ನು ಕಂಡಿದೆ. ಈ ಬೆನ್ನಲ್ಲೇ ಮಾಧ್ಯಮಗೋಷ್ಟಿ ನಡೆಸಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದ ಜನತೆಗೆ ಧನ್ಯವಾದ ಅರ್ಪಿಸಿದ್ದರು.
ಕಾಂಗ್ರೆಸ್ ಬಹುಮತ ಪಡೆದ ಹಿನ್ನೆಲೆ ಇಂದು ಸಂಜೆ 5.30ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ ಕರೆದಿತ್ತು. ಇಲ್ಲಿ ಮುಖ್ಯಮಂತ್ರಿ ಬಗ್ಗೆ ನಿರ್ಣಯ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದರು. ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೂವರು ವೀಕ್ಷಕರನ್ನು ನೇಮಕ ಮಾಡಿದ್ದಾರೆ. ಇವರಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ಕುಮಾರ್ ಶಿಂಧೆ, ಕಾಂಗ್ರೆಸ್ ನಾಯಕರುಗಳಾದ ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಅವರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ಕುಮಾರ್ ಶಿಂಧೆ, ಕಾಂಗ್ರೆಸ್ ನಾಯಕರುಗಳಾದ ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಅವರನ್ನು ವೀಕ್ಷಕರನ್ನಾಗಿ ಆಯ್ಕೆ ಮಾಡಿದ್ದಾರೆ. ಇವರು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಉಪಸ್ಥಿತರಿದ್ದು, ಪಕ್ಷದ ಹೈಕಮಾಂಡ್ಗೆ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ಶನಿವಾರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿರುವುದನ್ನು '2024ರ ಚುನಾವಣೆಯ ಮೈಲಿಗಲ್ಲುಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದ್ದರು.
ಕಾಂಗ್ರೆಸ್ ಭರ್ಜರಿ ಗೆಲುವಿನ ಬಗ್ಗೆ ಮಾತನಾಡಿದ್ದ ಕೆ.ಸಿ.ವೇಣುಗೋಪಾಲ್, ರಾಜ್ಯದಲ್ಲಿ ಕಾಂಗ್ರೆಸ್ ಬಡವರ ಪರ ನಿಂತಿದೆ. ಹೀಗಾಗಿ ರಾಜ್ಯದಲ್ಲಿ ಜನಾದೇಶ ಗೆದ್ದಿದೆ. ಬಿಜೆಪಿಯ ಒಡೆದು ಆಳುವ ರಾಜಕೀಯವು ಪ್ರತಿ ಬಾರಿ ಯಶಸ್ವಿಯಾಗುವುದಿಲ್ಲ. ಇದು ಬಿಜೆಪಿ ಒಂದು ಸ್ಪಷ್ಟ ಸಂದೇಶ ಎಂದು ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್ ರಾಜ್ಯದ ಬಡ ಜನರ ಪರ ನಿಂತಿತ್ತು. ಬಿಜೆಪಿ ಶ್ರೀಮಂತರ ಪರ ನಿಂತಿದ್ದರು. ಅಂತಿಮವಾಗಿ ಈ ಚುನಾವಣೆಯಲ್ಲಿ ಬಡವರು ಗೆದ್ದಿದ್ದಾರೆ ಎಂದು ಹೇಳಿದ್ದರು.
ಚುನಾವಣಾ ಆಯೋಗದ ಪ್ರಕಾರ, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 135 ಸ್ಥಾನಗಳನ್ನು ಗೆದ್ದು, ಆಡಳಿತಾರೂಢ ಬಿಜೆಪಿ ಪಕ್ಷವನ್ನು ಹೀನಾಯವಾಗಿ ಸೋಲಿಸಿದೆ. ಬಿಜೆಪಿ 66 ಸ್ಥಾನಗಳಲ್ಲಿ ಗೆದ್ದು ಭಾರಿ ಹಿನ್ನಡೆ ಅನುಭವಿಸಿದೆ. ಜೆಡಿಎಸ್ 19 ಸ್ಥಾನಗಳನ್ನು ಗಳಿಸಿದ್ದು, ಕಿಂಗ್ ಮೇಕರ್ ಆಗುವ ಕನಸು ಭಗ್ನವಾಗಿದೆ. ಪಕ್ಷೇತರರು ಎರಡು ಸ್ಥಾನಗಳಲ್ಲಿ ಜಯಗಳಿಸಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಮತ್ತು ಸರ್ವೋದಯ ಕರ್ನಾಟಕ ಪಕ್ಷ ತಲಾ ಒಂದೊಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಇದನ್ನೂ ಓದಿ : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಶಾಸಕರು