ಬೆಂಗಳೂರು: ರಾಜ್ಯದಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.
ಕೊರೊನಾ ಸೋಂಕಿಗೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಆಸ್ಪತ್ರೆಯಿಂದಲೇ ಆಡಳಿತ ನಿರ್ವಹಣೆ ಮುಂದುವರೆಸುತ್ತಿದ್ದಾರೆ. ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.
ಮಳೆಯ ಬಗ್ಗೆ ಕ್ಷಣ-ಕ್ಷಣದ ಮಾಹಿತಿ ತೆಗೆದುಕೊಳ್ಳುವುದು ಸೇರಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ತುರ್ತು ಸಂದರ್ಭಕ್ಕಾಗಿ ಕೂಡಲೇ 50 ಕೋಟಿ ಹಣವನ್ನು ಬಿಡುಗಡೆಗೊಳಿಸುವಂತೆ ಸೂಚಿಸಿದ್ದಾರೆ.
ನಂತರ ಕೆಲ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮುಖಾಂತರ ಸಂಪರ್ಕಿಸಿದ ಮುಖ್ಯಮಂತ್ರಿಗಳು ಮಳೆಯ ಬಗ್ಗೆ ಮಾಹಿತಿ ಪಡೆದರು. ಸಮಸ್ಯೆಯನ್ನು ಆಲಿಸಿದ ಸಿಎಂ ಯಾವುದಕ್ಕೂ ತೊಂದರೆಯಾಗದಂತೆ ಕ್ರಮಕೈಗೊಳ್ಳಿ ಎಂದು ಸೂಚಿಸಿದರು. ಇದರ ಜೊತೆಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ದರ್ಶನ್ ಅವರಿಗೆ ಕರೆ ಮಾಡಿ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಚಿಕ್ಕಮಗಳೂರು ಜಿಲ್ಲಾಧಿಕಾರಿಗೆ ಕರೆ ಮಾಡಿದ ಸಿಎಂ:
ಚಿಕ್ಕಮಗಳೂರು ಜಿಲ್ಲಾಧಿಕಾರಿಗೆ ಕರೆ ಮಾಡಿದ ಮುಖ್ಯಮಂತ್ರಿಗಳು ಮೂಡಿಗೆರೆ ತಾಲೂಕು ಕೆಂಬತ್ಮಕ್ಕಿಯಲ್ಲಿ ಮಳೆಯಿಂದ ಹಾನಿಯಾದ 5 ಎಕರೆ ಬಾಳೆ ತೋಟವನ್ನು ಖುದ್ದು ವೀಕ್ಷಣೆ ಮಾಡಿ, ಪರಿಹಾರ ನೀಡುವಂತೆ ಸೂಚನೆ ನೀಡಿದರು.