ಬೆಂಗಳೂರು: ಘನತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾಗಿರುವ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಸ್ಥಗಿತಗೊಳಿಸುತ್ತೇವೆ ಎಂದು ಹೈಕೋರ್ಟ್ಗೆ ತಿಳಿಸಿದ್ದಾರೆ.
ಕಟ್ಟಡ ನಿರ್ಮಾಣ ಮತ್ತು ತೆರವು ತ್ಯಾಜ್ಯ ನಿರ್ವಹಣೆ-2016ರ ನಿಯಮಗಳನ್ನು ಜಾರಿಗೊಳಿಸುವವರೆಗೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸಲು ಗುತ್ತಿಗೆದಾರರಿಗೆ ಸೂಚಿಸುತ್ತೇವೆ ಎಂದು ಪಾಲಿಕೆ ಆಯುಕ್ತರೂ ಆಗಿರುವ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್ ಶ್ರೀಧರ್ ಇಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಘನತ್ಯಾಜ್ಯ ನಿರ್ವಹಣೆ ಸಂಬಂಧ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾದ ಆಯುಕ್ತ ಅಕ್ಷಯ್ ಶ್ರೀಧರ್ ಅವರನ್ನು ಪ್ರಶ್ನಿಸಿದ ಪೀಠ, ತ್ಯಾಜ್ಯ ನಿರ್ವಹಣೆಗೆ 2016ರ ನಿಮಗಳನ್ನು ಪಾಲಿಸುತ್ತಿದ್ದೀರಾ? ಇಲ್ಲ ಎಂದಾದರೆ ನಿಯಮಗಳನ್ನು ಪಾಲಿಸುವವರೆಗೆ ಕಾಮಗಾರಿಗಳನ್ನು ಸ್ಥಗಿತಗೊಳಿಸುತ್ತೀರಾ ಎಂದು ಪ್ರಶ್ನಿಸಿತು.
ಓದಿ: 6-9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಪುನಾರಂಭ: ವೇಳಾಪಟ್ಟಿ ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ
ಇದಕ್ಕೆ ಆಯುಕ್ತರು ಕಾರಣಗಳನ್ನು ನೀಡಲು ಮುಂದಾದರು. ಮಧ್ಯಪ್ರವೇಶಿಸಿದ ಪೀಠ, ಸುತ್ತಿ ಬಳಸಿ ಮಾತನಾಡುವುದು ಬೇಡ. ನೇರ ಪ್ರಶ್ನೆಗೆ ಹೌದು ಅಥವಾ ಇಲ್ಲ ಎಂದು ನೇರ ಉತ್ತರ ನೀಡಿ ಎಂದು ತಾಕೀತು ಮಾಡಿತು. ಆ ವೇಳೆ ಪ್ರಮಾದ ಒಪ್ಪಿಕೊಂಡ ಆಯುಕ್ತರು, ನಿಯಮಗಳನ್ನು ಪಾಲಿಸಲಾಗುತ್ತಿಲ್ಲ. ಅವುಗಳನ್ನು ಅನುಸರಿಸುವವರೆಗೆ ಕಾಮಗಾರಿಗಳನ್ನು ಸ್ಥಗಿತಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗುವುದು ಎಂದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಆಯುಕ್ತರು 2016ರ ನಿಯಮಗಳನ್ನು ಪಾಲಿಸುವ ಕುರಿತು ಸೂಕ್ತ ಪ್ರಮಾಣಪತ್ರ ಸಲ್ಲಿಸಲಿ. ಅದನ್ನು ಪರಿಶೀಲಿಸಿದ ಬಳಿಕ ಕಾಮಗಾರಿ ಸ್ಥಗಿತಗೊಳಿಸುವ ಬಗ್ಗೆ ಆಯುಕ್ತರು ನೀಡಿರುವ ಹೇಳಿಕೆಯನ್ನು ಕೈಬಿಡುವ ಬಗ್ಗೆ ಪರಿಶೀಲಿಸುತ್ತೇವೆ ಎಂದು ತಿಳಿಸಿ, ವಿಚಾರಣೆ ಮುಂದೂಡಿತು.